Featured, ಇತರೆ, ಸ್ಥಳೀಯ

ಕರ್ನಾಟಕದಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ನಾಳೆಯಿಂದ ಚಾಲನೆ

ಡಿ. 24ರವರೆಗೆ ನಡೆಯಲಿರುವ ಅಭಿಯಾನದಲ್ಲಿ ಐದು ವರ್ಷದೊಳಗಿನ ಮಕ್ಕಳಿಗೆ ಪೊಲಿಯೋ ಹನಿ

ಬೆಂಗಳೂರು, ಡಿಸೆಂಬರ್ 20:
ದೇಶವನ್ನು ಸಂಪೂರ್ಣವಾಗಿ ಪೋಲಿಯೋ ಮುಕ್ತವಾಗಿಸುವ ಉದ್ದೇಶದೊಂದಿಗೆ ಕರ್ನಾಟಕದಾದ್ಯಂತ ನಾಳೆಯಿಂದ (ಡಿ.21) ಡಿ.24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ–2025 ಆರಂಭಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೆ ಪೊಲಿಯೋ ಲಸಿಕೆ ಹಾಕಿಸಬೇಕು ಎಂದು ಕರ್ನಾಟಕ ಆರೋಗ್ಯ ಇಲಾಖೆ ಪೋಷಕರಿಗೆ ಮನವಿ ಮಾಡಿದೆ.

ಪೋಲಿಯೋ ಅತ್ಯಂತ ಮಾರಕ ರೋಗವಾಗಿದ್ದು, ಮಕ್ಕಳಲ್ಲಿ ಶಾಶ್ವತ ಅಂಗವೈಕಲ್ಯಕ್ಕೆ ಕಾರಣವಾಗಬಹುದು. ಈ ರೋಗಕ್ಕೆ ಶಾಶ್ವತ ಚಿಕಿತ್ಸೆ ಇಲ್ಲದಿದ್ದರೂ, ಲಸಿಕೆ ಮೂಲಕ ಸಂಪೂರ್ಣವಾಗಿ ತಡೆಗಟ್ಟಲು ಸಾಧ್ಯವಿದೆ. “ಎರಡು ಹನಿ ಲಸಿಕೆ – ನಿಮ್ಮ ಮಗುವಿನ ಭವಿಷ್ಯವನ್ನು ನಿರ್ಧರಿಸುತ್ತದೆ” ಎಂಬ ಘೋಷವಾಕ್ಯದಡಿ ಸರ್ಕಾರ ಅಭಿಯಾನಕ್ಕೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದೆ.
ಅಭಿಯಾನದ ಅಂಗವಾಗಿ ಹತ್ತಿರದ ಸರ್ಕಾರಿ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಅಂಗನವಾಡಿಗಳು ಸೇರಿದಂತೆ ಬಸ್ ನಿಲ್ದಾಣಗಳು, ರೈಲು ನಿಲ್ದಾಣಗಳಂತಹ ಜನಸಂಚಾರ ಹೆಚ್ಚಿರುವ ಸಾರ್ವಜನಿಕ ಸ್ಥಳಗಳಲ್ಲಿ ಲಸಿಕೆ ಕೇಂದ್ರಗಳನ್ನು ತೆರೆಯಲಾಗಿದೆ. ಅಭಿಯಾನದ ಮೊದಲ ದಿನ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದ್ದು, ಮುಂದಿನ ಎರಡು ದಿನಗಳಲ್ಲಿ ಆರೋಗ್ಯ ಇಲಾಖೆ ಕಾರ್ಯಕರ್ತರು ಮನೆಮನೆಗೆ ಭೇಟಿ ನೀಡಿ ಲಸಿಕೆ ಪಡೆಯದ ಮಕ್ಕಳಿಗೆ ಲಸಿಕೆ ನೀಡಲಿದ್ದಾರೆ.
ಪೋಷಕರು ಈ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆಗೆ ಸಹಕರಿಸಬೇಕು ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ.

Related Posts