Featured, ಇತರೆ, ಸ್ಥಳೀಯ

ಸುಳ್ಯ: ಶಾಸಕಿ ಕು. ಭಾಗೀರಥಿ ಮುರುಳ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ – ತಕ್ಷಣ ಕ್ರಮಕ್ಕೆ ಆಗ್ರಹ : ಹರೀಶ್ ಕಂಜಿಪಿಲಿ

ಸುಳ್ಯ, ಜ.8:
ಕಡು ಬಡತನದ ಹಿನ್ನೆಲೆಯಿಂದ ಹೊರಬಂದು ಕಠಿಣ ಪರಿಶ್ರಮದ ಮೂಲಕ ಸಾರ್ವಜನಿಕ ಜೀವನಕ್ಕೆ ಕಾಲಿಟ್ಟು, ಗ್ರಾಮ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಮಟ್ಟದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿ, ಇಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ಗಳನ್ನು ಹರಿಬಿಟ್ಟಿರುವ ಕಿಡಿಗೇಡಿಗಳ ವಿರುದ್ಧ ಜಿಲ್ಲಾ ಪೊಲೀಸರು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸುಳ್ಯ ಬಿಜೆಪಿ ಹಾಗೂ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಶಾಸಕಿಯವರು ತಮ್ಮ ಕ್ಷೇತ್ರದ ದಲಿತ ಸಮುದಾಯದ ಬಗ್ಗೆ ವಿಶೇಷ ಕಾಳಜಿವಹಿಸಿ ಸೇವೆ ಸಲ್ಲಿಸುತ್ತಿರುವ ಸಂದರ್ಭದಲ್ಲಿ, ಅವರ ಕುರಿತು “ಭಾವಪೂರ್ಣ ಶ್ರದ್ಧಾಂಜಲಿ” ಎಂಬ ಅವಹೇಳನಕಾರಿ ಪೋಸ್ಟ್ ಹಾಕಿರುವುದು ಕಿಡಿಗೇಡಿಯ ಹೀನ ಮನಸ್ಥಿತಿಯನ್ನು ತೋರಿಸುತ್ತದೆ. ಇಂತಹ ಮನೋರೋಗಿ ವ್ಯಕ್ತಿಗಳು ಸಮಾಜದ ಮಧ್ಯೆ ಇರಲು ಯೋಗ್ಯರಲ್ಲ ಎಂದು ಬಿಜೆಪಿ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಮಾಜಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಅವರು, “ಸುಳ್ಯ ಬಿಜೆಪಿ ಹಾಗೂ ಜಿಲ್ಲಾ ಬಿಜೆಪಿಯ ಎಲ್ಲಾ ಕಾರ್ಯಕರ್ತರು ಶಾಸಕಿ ಭಾಗೀರಥಿ ಮುರುಳ್ಯ ಅವರ ಜೊತೆ ಗಟ್ಟಿಯಾಗಿ ನಿಂತಿದ್ದಾರೆ. ಈ ವಿಷಯವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ, ನಿಷ್ಪಕ್ಷಪಾತವಾಗಿ ಸ್ವಯಂಪ್ರೇರಿತ ಕ್ರಮ ಕೈಗೊಂಡು ಕಿಡಿಗೇಡಿಯನ್ನು ತಕ್ಷಣ ಬಂಧಿಸಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟಕ್ಕೆ ನಾವು ಸದಾ ಸಿದ್ಧರಾಗಿದ್ದೇವೆ” ಎಂದು ಎಚ್ಚರಿಸಿದರು.
ಶಾಸಕಿ ವಿರುದ್ಧದ ಅವಹೇಳನಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ಸಾಮಾಜಿಕ ಜಾಲತಾಣದ ದುರುಪಯೋಗ ತಡೆಯಲು ಕಟ್ಟುನಿಟ್ಟಿನ ಕ್ರಮ ಅಗತ್ಯವೆಂಬ ಆಗ್ರಹವೂ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

 

Related Posts