ಪೆರ್ಡೂರು, ಫೆ. 20: ದೇವಸ್ಥಾನದ ಎದುರಿನ ಗದ್ದೆಯಲ್ಲಿ ಕಟ್ಟಿದ್ದ ಕರುವನ್ನು ಕಳ್ಳತನ ಮಾಡಿ ಕಸಾಯಿಖಾನೆಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.
ಕಳೆದ ಮಂಗಳವಾರ ರಾತ್ರಿ ಸುಮಾರು 10:30ರ ಸುಮಾರಿಗೆ ಪೆರ್ಡೂರು ದೇವಸ್ಥಾನದ ಮುಂಭಾಗದ ಗದ್ದೆಯಲ್ಲಿ ಕರುವನ್ನು ಮೇಯಲು ಬಿಡಲಾಗಿತ್ತು. ಈ ವೇಳೆ ಸ್ಥಳಕ್ಕೆ ಬಂದ ಆರೋಪಿಗಳು ಕರುವನ್ನು ಕಳ್ಳತನ ಮಾಡಿ, ಪೂರ್ವಸಿದ್ಧವಾಗಿಟ್ಟಿದ್ದ ಆಟೋ ರಿಕ್ಷಾದಲ್ಲಿ ತುಂಬಿಸಿಕೊಂಡು ಕಸಾಯಿಖಾನೆಗೆ ಸಾಗಿಸಲು ಪ್ರಯತ್ನಿಸಿದ್ದರು.
ಈ ಕುರಿತು ಖಚಿತ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಹಿರಿಯಡಕ ಪೊಲೀಸರು ತ್ವರಿತ ಕಾರ್ಯಾಚರಣೆ ಕೈಗೊಂಡು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾದರು.
ಬಂಧಿತರನ್ನು ರಾಘವೇಂದ್ರ (36) ಹಾಗೂ ಸುಧೀಂದ್ರ ಶೆಟ್ಟಿ ಅಲಿಯಾಸ್ ಬಾಬು (36) ಎಂದು ಗುರುತಿಸಲಾಗಿದೆ. ಕೃತ್ಯಕ್ಕೆ ಬಳಸಲಾಗಿದ್ದ ಆಟೋ ರಿಕ್ಷಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ವ್ಯವಸ್ಥಿತವಾಗಿ ಜಾನುವಾರು ಕಳ್ಳತನದಲ್ಲಿ ತೊಡಗಿದ್ದಾರೆಯೇ ಎಂಬ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಪೊಲೀಸ್ ಕಾರ್ಯಾಚರಣೆ
ಉಡುಪಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಬೆಳ್ಳಿಯಪ್ಪ ಕೆ.ಯು ಅವರ ನೇರ ನಿರ್ದೇಶನದಲ್ಲಿ ಹಾಗೂ ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರಾದ ಗೋಪೀಕೃಷ್ಣ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಯಿತು. ಹಿರಿಯಡಕ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಂಡದಲ್ಲಿ ಪಾಲ್ಗೊಂಡಿದ್ದರು.
ಬಂಧಿತ ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ನ್ಯಾಯಾಲಯವು ಇಬ್ಬರಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ



