Featured, ಇತರೆ, ಸ್ಥಳೀಯ

ಕಾಸರಗೋಡಿನಲ್ಲಿ ಕನ್ನಡ ಪ್ರಾತಿನಿಧ್ಯಕ್ಕೆ ಒತ್ತು: 2 ತಿಂಗಳಲ್ಲಿ ತೀರ್ಮಾನಿಸಲು ಕೇರಳ ಕೋರ್ಟ್ ಆದೇಶ

ತಿರುವನಂತಪುರ: ಕೇರಳದ ಕಾಸರಗೋಡು ತಾಲೂಕಿನಲ್ಲಿ ಸರ್ಕಾರಿ ವ್ಯವಹಾರಗಳಲ್ಲಿ ಕನ್ನಡ ಭಾಷೆಯ ಬಳಕೆಗೆ ಸಂಬಂಧಿಸಿದಂತೆ 2 ತಿಂಗಳೊಳಗೆ ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳುವಂತೆ ಕೇರಳ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಕಾಸರಗೋಡಿನ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಬಳಕೆಗೆ ಅನುಮತಿ ನೀಡುವ 1982ರ ಸುತ್ತೋಲೆಯನ್ನು ಜಾರಿಗೊಳಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ ಈ ಸೂಚನೆ ನೀಡಿದೆ.

ಅರ್ಜಿದಾರರ ಪ್ರಕಾರ, ಕಾಸರಗೋಡು ಹಾಗೂ ಮಂಜೇಶ್ವರ ತಾಲೂಕಿನ ವಿವಿಧ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಕನ್ನಡದಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಪರಿಗಣಿಸಲಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಾಸರಗೋಡು ಮೂಲದ ವಕೀಲರೊಬ್ಬರು ಹೈಕೋರ್ಟ್ ಮೊರೆ ಹೋಗಿದ್ದರು.

ಮುಖ್ಯ ನ್ಯಾಯಮೂರ್ತಿ ಸೌಮೆನ್ ಸೆನ್ ಹಾಗೂ ನ್ಯಾಯಮೂರ್ತಿ ಶ್ಯಾಮ್ ಕುಮಾರ್ ವಿ.ಎಂ. ಅವರನ್ನೊಳಗೊಂಡ ಪೀಠವು ಪ್ರಕರಣವನ್ನು ವಿಚಾರಿಸಿ, 1982ರ ಸುತ್ತೋಲೆಯನ್ನು ಜಾರಿಗೊಳಿಸುವ ಬಗ್ಗೆ ಸರ್ಕಾರವು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದೆ.

ಇದೇ ವೇಳೆ, ಈ ಸಂಬಂಧ ಈಗಾಗಲೇ ಜನವರಿಯಲ್ಲಿ ರಾಜ್ಯ ಸರ್ಕಾರಕ್ಕೆ ಅರ್ಜಿ ಸಲ್ಲಿಸಲಾದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂಬುದನ್ನು ಅರ್ಜಿದಾರರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಪ್ರಕರಣದ ವಿಚಾರಣೆಯಲ್ಲಿ ರಾಜ್ಯ ಸರ್ಕಾರ ತನ್ನ ಅಭಿಪ್ರಾಯವನ್ನು ಕೋರ್ಟ್‌ಗೆ ಸಲ್ಲಿಸಿದ್ದು, ನ್ಯಾಯಾಲಯದ ನಿರ್ದೇಶನ ದೊರೆತರೆ ಸಂಬಂಧಿತ ಪ್ರಾಧಿಕಾರವು ಅರ್ಜಿಯನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಅರ್ಜಿಯನ್ನು ವಿಲೇವಾರಿ ಮಾಡಿರುವ ನ್ಯಾಯಪೀಠ, ತೀರ್ಪಿನ ಪ್ರತಿಯನ್ನು ಸ್ವೀಕರಿಸಿದ ದಿನಾಂಕದಿಂದ 8 ವಾರಗಳೊಳಗೆ ಅರ್ಜಿದಾರರಿಗೆ ಸಮಂಜಸವಾದ ಅವಕಾಶ ನೀಡಿ ಕಾನೂನಿನ ಪ್ರಕಾರ ವಿಚಾರಣೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವಂತೆ ಸೂಚಿಸಿದೆ. ಜೊತೆಗೆ, ಕೈಗೊಂಡ ನಿರ್ಧಾರವನ್ನು ಒಂದು ವಾರದೊಳಗೆ ಅರ್ಜಿದಾರರಿಗೆ ತಿಳಿಸುವಂತೆ ಸಹ ನಿರ್ದೇಶನ ನೀಡಿದೆ.

m

Related Posts