ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ಉದ್ಘಾಟನೆ; 20ಕ್ಕೂ ಹೆಚ್ಚು ಮಕ್ಕಳ ದಾಖಲಾತಿ
ಸುಳ್ಯ, ಜೂ. 9: ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಮೂಡ್ನೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಹುಕಾಲದ ಬೇಡಿಕೆಯಾಗಿದ್ದ LKG ಹಾಗೂ UKG ತರಗತಿಗಳನ್ನು ಸೋಮವಾರ ಅಧಿಕೃತವಾಗಿ ಉದ್ಘಾಟಿಸಲಾಯಿತು. ನೂತನ ತರಗತಿಗಳನ್ನು ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು.
ಶಾಲೆಯಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸುವಂತೆ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಲಾಗಿತ್ತು. ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ ಕಳೆದ ಶೈಕ್ಷಣಿಕ ವರ್ಷದ ಮಧ್ಯಭಾಗದಲ್ಲೇ ತರಗತಿಗಳನ್ನು ಆರಂಭಿಸಲು ಅನುಮತಿ ನೀಡಿತ್ತು.
ಅದರಂತೆ, ಪ್ರಸ್ತುತ ಶೈಕ್ಷಣಿಕ ವರ್ಷದ ಆರಂಭದಲ್ಲೇ 20ಕ್ಕೂ ಹೆಚ್ಚು ಮಕ್ಕಳ ದಾಖಲಾತಿಯೊಂದಿಗೆ LKG-UKG ತರಗತಿಗಳು ಕಾರ್ಯಾರಂಭಿಸಿವೆ. ಗ್ರಾಮೀಣ ಭಾಗದ ಪುಟಾಣಿಗಳಿಗೆ ಸ್ಥಳೀಯ ಮಟ್ಟದಲ್ಲೇ ಗುಣಮಟ್ಟದ ಪೂರ್ವ ಪ್ರಾಥಮಿಕ ಶಿಕ್ಷಣ ದೊರೆಯುವಂತಾಗಿರುವುದು ಪೋಷಕರಲ್ಲಿ ಸಂತಸ ಮೂಡಿಸಿದೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿಜಯಕುಮಾರ್ ಎರ್ಮೆಟ್ಟಿ, ಶಾಲಾ ಮುಖ್ಯೋಪಾಧ್ಯಾಯ ದೇವರಾಜ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನವೀನ್ ನಳಿಯಾರು, ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷೆ ಗೀತಾ ಹೋಸೊಳಿಕೆ, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಗೋವಿಂದ ಆಳವುಪಾರೆ ಸೇರಿದಂತೆ ಶಾಲಾ ಶಿಕ್ಷಕರು, ಪೋಷಕರು, ಹಳೆ ವಿದ್ಯಾರ್ಥಿಗಳು ಹಾಗೂ ಊರಿನ ಹಿರಿಯರು ಉಪಸ್ಥಿತರಿದ್ದರು.
ಗ್ರಾಮೀಣ ಪ್ರದೇಶದ ಮಕ್ಕಳಿಗೆ ಆರಂಭಿಕ ಹಂತದಲ್ಲೇ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಆರಂಭಗೊಂಡಿರುವ ಈ ಪೂರ್ವ ಪ್ರಾಥಮಿಕ ತರಗತಿಗಳು ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲ್ಪಡುತ್ತಿವೆ.





m
