Featured, ಇತರೆ, ಸ್ಥಳೀಯ

ಸಂಸದ ತೇಜಸ್ವಿ ಸೂರ್ಯ ಪತ್ನಿ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್‌ಗೆ ಕೇಂದ್ರದ ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ

ಕರ್ನಾಟಕ ಸಂಗೀತ ಕ್ಷೇತ್ರದ ಸಾಧನೆಗೆ ರಾಷ್ಟ್ರೀಯ ಮಟ್ಟದ ಗೌರವ; ಸಂಗೀತ ನಾಟಕ ಅಕಾಡೆಮಿಯ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ

ಬೆಂಗಳೂರು, ಜೂನ್ 13: ಖ್ಯಾತ ಗಾಯಕಿ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರ ಪತ್ನಿ ಶಿವಶ್ರೀ ಸ್ಕಂದಪ್ರಸಾದ್ ಅವರು ಸಂಗೀತ ನಾಟಕ ಅಕಾಡೆಮಿ ವತಿಯಿಂದ ಪ್ರದಾನವಾಗುವ 2025ನೇ ಸಾಲಿನ ಪ್ರತಿಷ್ಠಿತ ‘ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ’ಕ್ಕೆ ಆಯ್ಕೆಯಾಗಿದ್ದಾರೆ.

ಸಂಗೀತ, ನೃತ್ಯ ಸೇರಿದಂತೆ ವಿವಿಧ ಕಲಾ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ ಯುವ ಕಲಾವಿದರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಭಾರತ ರತ್ನ ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರ ಸ್ಮರಣಾರ್ಥ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಶಿವಶ್ರೀ ಸ್ಕಂದಪ್ರಸಾದ್ ಅವರು ಕರ್ನಾಟಕ ಸಂಗೀತ, ಭಜನೆ ಹಾಗೂ ಭಕ್ತಿಗೀತೆಗಳ ಗಾಯನದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದು, ಭಾವಪೂರ್ಣ ಗಾಯನದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಸಂಗೀತ ಕ್ಷೇತ್ರಕ್ಕೆ ನೀಡಿದ ಗಮನಾರ್ಹ ಕೊಡುಗೆಯನ್ನು ಪರಿಗಣಿಸಿ ಅವರಿಗೆ ಈ ಪ್ರತಿಷ್ಠಿತ ಪುರಸ್ಕಾರ ಲಭಿಸಿದೆ.

ಸಂಗೀತ ನಾಟಕ ಅಕಾಡೆಮಿ 1952ರಿಂದ ವಿವಿಧ ಕಲಾ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡುತ್ತಾ ಬಂದಿದೆ. ಈ ಬಾರಿ ಅಕಾಡೆಮಿಯ ಫೆಲೋಶಿಪ್‌ಗೆ ₹3 ಲಕ್ಷ, ಅಕಾಡೆಮಿ ಪ್ರಶಸ್ತಿಗೆ ₹1 ಲಕ್ಷ ಹಾಗೂ ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರಕ್ಕೆ ₹25,000 ನಗದು ಬಹುಮಾನ, ತಾಮ್ರಪತ್ರ ಮತ್ತು ಅಂಗವಸ್ತ್ರವನ್ನು ಒಳಗೊಂಡ ಗೌರವ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶಿವಶ್ರೀ ಅವರ ಈ ಸಾಧನೆಗೆ ಸಂಗೀತ ವಲಯದ ಗಣ್ಯರು, ಅಭಿಮಾನಿಗಳು ಹಾಗೂ ಸಾರ್ವಜನಿಕ ವಲಯದಿಂದ ಅಭಿನಂದನೆಗಳ ಮಹಾಪೂರ ಹರಿದುಬಂದಿದೆ.

m

Related Posts