Featured, ಅಂಕಣ, ಸ್ಥಳೀಯ

ಕೃಷ್ಣಾಪುರ ಉಸ್ತಾದ್ ಮೇಲಿನ ಹಲ್ಲೆ ನಾಗರಿಕ ಸಮಾಜ ತಲೆತಗ್ಗಿಸುವ ಕೃತ್ಯ – ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಡಿಪಿಐ ಆಗ್ರಹ

ಮಂಗಳೂರು: ಕೃಷ್ಣಾಪುರದಲ್ಲಿ ಉಸ್ತಾದರೊಬ್ಬರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ನಗರ ಜಿಲ್ಲಾ ಕಾರ್ಯದರ್ಶಿ ನಿಸಾರ್ ಮರವೂರು ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಧಾರ್ಮಿಕ ಶಿಕ್ಷಣದ ಮೂಲಕ ಸಮಾಜದಲ್ಲಿ ನೈತಿಕತೆ, ಶಿಸ್ತು ಮತ್ತು ಉತ್ತಮ ಮೌಲ್ಯಗಳನ್ನು ಬೆಳೆಸುವ ಉಸ್ತಾದರ ಮೇಲೆ ಹಲ್ಲೆ ನಡೆಸಿರುವುದು ನಾಗರಿಕ ಸಮಾಜವೇ ತಲೆತಗ್ಗಿಸುವ ಕೃತ್ಯವಾಗಿದೆ ಎಂದು ಹೇಳಿದ್ದಾರೆ.

ಯಾವುದೇ ವ್ಯಕ್ತಿಯ ವಿರುದ್ಧ ದೂರು ಅಥವಾ ಅಸಮಾಧಾನವಿದ್ದರೆ, ಅದನ್ನು ಕಾನೂನಿನ ಚೌಕಟ್ಟಿನೊಳಗೆ ಪರಿಹರಿಸಬೇಕೇ ಹೊರತು, ಕಾನೂನನ್ನು ಕೈಗೆತ್ತಿಕೊಂಡು ಹಲ್ಲೆ ನಡೆಸುವುದು ಎಂದಿಗೂ ಒಪ್ಪಲಾಗದು. ಉಸ್ತಾದರ ವಿರುದ್ಧ ಯಾವುದೇ ಆರೋಪಗಳಿದ್ದರೂ, ಸಂಬಂಧಪಟ್ಟ ಮಸೀದಿ ಆಡಳಿತ ಮಂಡಳಿ, ಮದರಸಾ ಸಮಿತಿ ಅಥವಾ ಪೊಲೀಸ್ ಇಲಾಖೆಯ ಮೂಲಕ ಕಾನೂನುಬದ್ಧವಾಗಿ ಕ್ರಮ ಕೈಗೊಳ್ಳುವ ಅವಕಾಶವಿದೆ. ಅದನ್ನು ಬಿಟ್ಟು ಹಲ್ಲೆಗೆ ಮುಂದಾಗಿರುವುದು ಕಾನೂನು ಮತ್ತು ಸುವ್ಯವಸ್ಥೆಗೆ ಸವಾಲು ಹಾಕಿದಂತಾಗಿದೆ ಎಂದು ಅವರು ತಿಳಿಸಿದ್ದಾರೆ.

ಧಾರ್ಮಿಕ ಶಿಕ್ಷಣ ನೀಡುವ ಉಸ್ತಾದರ ಗೌರವ ಹಾಗೂ ಸುರಕ್ಷತೆಯನ್ನು ಕಾಪಾಡುವುದು ಸರ್ಕಾರ ಮತ್ತು ಸಮಾಜದ ಜವಾಬ್ದಾರಿಯಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಂಡು, ಪ್ರಕರಣದ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಿ, ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ನಿಸಾರ್ ಮರವೂರು ಆಗ್ರಹಿಸಿದ್ದಾರೆ.

ಉಸ್ತಾದರ ಮೇಲೆ ನಡೆಯುವ ಯಾವುದೇ ರೀತಿಯ ಹಲ್ಲೆ ಅಥವಾ ಬೆದರಿಕೆಗಳನ್ನು ಎಸ್‌ಡಿಪಿಐ ಎಂದಿಗೂ ಸಹಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Related Posts