ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ ರಾಜ್ಯಾಧ್ಯಕ್ಷ ಯುನೈಸ್ ಪೆರಾಜೆ ಕಾರ್ಯಕ್ರಮದಲ್ಲಿ ಬಾಗಿ
ಸುಳ್ಯ: ಅಜ್ಜಾವರ ಗ್ರಾಮದ ಇರುವಂಬಳ್ಳ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಹಾಗೂ ದೇಶಭಕ್ತಿಯ ಸಂಭ್ರಮದೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ‘ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’ದ ಕರ್ನಾಟಕ ರಾಜ್ಯಾಧ್ಯಕ್ಷ ಯುನೈಸ್ ಪೆರಾಜೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಬೆಳಗ್ಗೆ 9 ಗಂಟೆಗೆ ನಡೆದ ಧ್ವಜಾರೋಹಣ ಕಾರ್ಯಕ್ರಮದ ನೇತೃತ್ವವನ್ನು ಶಾಲಾ ಅಭಿವೃದ್ಧಿ ಮತ್ತು ಉಸ್ತುವಾರಿ ಸಮಿತಿ (SDMC) ಅಧ್ಯಕ್ಷ ಅಬೂಬಕ್ಕರ್ ಹಾಜಿ ಇರುವಂಬಳ್ಳ ವಹಿಸಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ರಾಷ್ಟ್ರಗೀತೆಯನ್ನು ಏಕಕಂಠದಿಂದ ಹಾಡಿದರು. ಶಾಲಾ ಮಕ್ಕಳ ಆಕರ್ಷಕ ಪಥಸಂಚಲನ ಹಾಗೂ ಗೌರವ ವಂದನೆ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿತು. ಶಾಲ ಶಿಕ್ಷಣ ಕ್ಷೇತ್ರದಲ್ಲಿ ಹಾಗೂ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಮುಖ್ಯೋಪಾಧ್ಯಾಯ ಉದಯ ಮತ್ತು ಸಹಶಿಕ್ಷಕಿ ಪಲ್ಲವಿ ಅವರನ್ನು ಶಾಲಾ ಸಮಿತಿ ಹಾಗೂ ಅತಿಥಿಗಳ ಪರವಾಗಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಮುಖ್ಯ ಅತಿಥಿಯಾಗಿ ಮಾತನಾಡಿದ ಯುನೈಸ್ ಪೆರಾಜೆ, “ಗ್ರಾಮೀಣ ಭಾಗದ ಸರಕಾರಿ ಕನ್ನಡ ಶಾಲೆಗಳು ನಮ್ಮ ಸಂಸ್ಕೃತಿಯ ತಳಹದಿಯಾಗಿವೆ. ಅವುಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸದೊಂದಿಗೆ ದೇಶಪ್ರೇಮ, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಂಡು ದೇಶದ ಪ್ರಗತಿಗೆ ಕೊಡುಗೆ ನೀಡಬೇಕು” ಎಂದು ಕರೆ ನೀಡಿದರು.
ಶಾಲಾ ಮುಖ್ಯೋಪಾಧ್ಯಾಯ ಉದಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನು ಸ್ವಾಗತಿಸಿದರು. ಬಳಿಕ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ದೇಶಭಕ್ತಿ ಗೀತೆಗಳಿಗೆ ವಿದ್ಯಾರ್ಥಿಗಳು ಪ್ರದರ್ಶಿಸಿದ ಸಮೂಹ ನೃತ್ಯ ಹಾಗೂ ಕಿರು ನಾಟಕಗಳು ಪೋಷಕರು ಮತ್ತು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾದವು.
ಸಹಶಿಕ್ಷಕಿ ಪಲ್ಲವಿ ಅವರು ಕಾರ್ಯಕ್ರಮದ ನಿರ್ವಹಣೆಯಲ್ಲಿ ಸಹಕರಿಸಿ ಕೊನೆಯಲ್ಲಿ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಪದಾಧಿಕಾರಿಗಳು, ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯರು ಹಾಗೂ ಇರುವಂಬಳ್ಳ ಪರಿಸರದ ಗ್ರಾಮಸ್ಥರು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರಿಗೂ ಸಿಹಿತಿಂಡಿ ವಿತರಿಸಲಾಯಿತು.
ವರದಿ ಮತ್ತು ಚಿತ್ರಗಳು : ಸತ್ತಾರ್ ಅಜ್ಜಾವರ





m
