ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಘಟಕಕ್ಕೆ ಟಿ.ಎಂ. ಶಾಹಿದ್ ತೆಕ್ಕಿಲ್ ಭೇಟಿ, ಸುರಕ್ಷತಾ ಕ್ರಮಗಳ ಪರಿಶೀಲನೆ
ಕಾರ್ಮಿಕರ ಮತ್ತು ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಲು ಸೂಚನೆ
ಮಂಗಳೂರು: ಮಂಗಳೂರು ರಿಫೈನರಿ ಆಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ಘಟಕದಲ್ಲಿ ಇತ್ತೀಚೆಗೆ ನಡೆದ ಸ್ಫೋಟದ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ (ಸಚಿವ ದರ್ಜೆ) ಟಿ.ಎಂ. ಶಾಹಿದ್ ತೆಕ್ಕಿಲ್ ಅವರು ಸಂಸ್ಥೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನಾ ಸ್ಥಳವನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಘಟಕದಲ್ಲಿ ದುಡಿಯುವ ಕಾರ್ಮಿಕರ ಹಿತರಕ್ಷಣೆ ಮತ್ತು ಸಾರ್ವಜನಿಕರ ಸುರಕ್ಷತೆ ಅತ್ಯಂತ ಮುಖ್ಯವಾಗಿದೆ ಎಂದು ತಿಳಿಸಿದರು. ಕೈಗಾರಿಕಾ ಘಟಕದಲ್ಲಿ ಮತ್ತು ಪರಿಸರ ಪ್ರದೇಶಗಳಲ್ಲಿ ಸುರಕ್ಷತೆಗೆ ಪ್ರಥಮ ಆದ್ಯತೆ ಸಿಗಬೇಕು ಎಂದ ಅವರು, ಅಗ್ನಿಶಾಮಕ ಹಾಗೂ ರಕ್ಷಣಾ ದಳವು ಸದಾ ಜಾಗರೂಕರಾಗಿದ್ದು ಇಡೀ ಆವರಣದ ಮೇಲೆ ಮತ್ತು ಸುತ್ತುಮುತ್ತಲಿನ ಪ್ರದೇಶ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ಸೂಚಿಸಿದರು . ಕೆಲಸ ಮಾಡುವ ಯಾವುದೇ ಕಾರ್ಮಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸಂಸ್ಥೆಯು ಅಗತ್ಯವಿರುವ ಎಲ್ಲಾ ರಕ್ಷಣಾ ಮುನ್ನೆಚ್ಚರಿಕೆಗಳನ್ನು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಹಾಗೂ ಇಂತಹ ಅವಘಡಗಳು ಭವಿಷ್ಯದಲ್ಲಿ ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಆಡಳಿತ ಮಂಡಳಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಎಂಆರ್‌ಪಿಎಲ್ ಸಂಸ್ಥೆಯ ಕಾರ್ಯವೈಖರಿಯನ್ನು ಶ್ಲಾಘಿಸಿದ ಟಿ.ಎಂ. ಶಾಹಿದ್ ತೆಕ್ಕಿಲ್, ಎಂಆರ್‌ಪಿಎಲ್ ದೇಶದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿದ್ದು, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಜನರಿಗೆ ಉದ್ಯೋಗಾವಕಾಶ ಒದಗಿಸಿ ಬದುಕು ರೂಪಿಸಿದೆ ಎಂದರು. ಕಂಪನಿಯ ಸಿಎಸ್‌ಆರ್ (ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ) ನಿಧಿಯ ಬಳಕೆಯು ವ್ಯವಸ್ಥಿತವಾಗಿದ್ದು, ಸ್ಥಳೀಯ ಸಮಾಜಮುಖಿ ಕಾರ್ಯಗಳು ಹಾಗೂ ಅಭಿವೃದ್ಧಿಗೆ ಸೂಕ್ತವಾಗಿ ವಿನಿಯೋಗವಾಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಮಿಕರ ಸುರಕ್ಷತೆಯನ್ನು ಖಾತ್ರಿಪಡಿಸಿಕೊಂಡು ಕೈಗಾರಿಕಾ ಪ್ರಗತಿ ಮುಂದುವರಿಯಬೇಕೆಂದು ಅವರು ಆಶಿಸಿದರು.
ಈ ಸಂದರ್ಭದಲ್ಲಿ ಶ್ರೀ ಸತೀಶ್ ಎಂ., ಜಿಎಂ (ಎಚ್‌ಆರ್), ಶ್ರೀ ನವೀನ್‌ಚಂದ್ರ ಪೈ, ಸಿಜಿಎಂ, ಶ್ರೀಮತಿ ಸೌಮ್ಯ ಚಂದ್ರಕರ್, ಜಿಎಂ (ಎಚ್‌ಆರ್ ಕಾಂಟ್ರಾಕ್ಟ್ ಸೆಲ್), ಹಾಗೂ ಶ್ರೀಮತಿ ಜಿ. ಮೀನಾಕ್ಷಿ, ಚೀಫ್ ಮ್ಯಾನೇಜರ್ – ಎಚ್‌ಆರ್ ಉಪಸ್ಥಿತರಿದ್ದರು.




Scroll To Top