ಬೆಂಗಳೂರು: ಅಕ್ಟೋಬರ್ 10: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನೀಡಲಾಗುವ ರಾಜ್ಯೋತ್ಸವ ರಾಜ್ಯ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡುವ ಸಮಿತಿಯ ಸದಸ್ಯರಾಗಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಅವರನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಸಾಹಿತ್ಯದ ಬೆಳವಣಿಗೆಗೆ ಗಣನೀಯ ಕೊಡುಗೆ ನೀಡಿದ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವ್ಯಕ್ತಿಗಳು ಹಾಗೂ ಸಂಘ-ಸಂಸ್ಥೆಗಳನ್ನು ಗುರುತಿಸಿ, ಪ್ರತಿವರ್ಷ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕರ್ನಾಟಕ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಈ ವರ್ಷದ ಪ್ರಶಸ್ತಿಗೆ ಅರ್ಹ ಸಾಧಕರನ್ನು ಆಯ್ಕೆ ಮಾಡುವ ಉದ್ದೇಶದಿಂದ ಸರ್ಕಾರ ಆಯ್ಕೆ ಸಮಿತಿಯನ್ನು ರಚಿಸಿದ್ದು, ಈ ಸಮಿತಿಗೆ ಸದಾನಂದ ಮಾವಜಿ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಅಧಿಕೃತ ಆದೇಶ ಹೊರಡಿಸಿದೆ.ಅರೆಭಾಷೆ ಸಂಸ್ಕೃತಿ, ಸಾಹಿತ್ಯ ಹಾಗೂ ಪರಂಪರೆಯ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿರುವ ಅಕಾಡೆಮಿಯ ಅಧ್ಯಕ್ಷರಿಗೆ ರಾಜ್ಯಮಟ್ಟದ ಮಹತ್ವದ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಸ್ಥಾನ ಲಭಿಸಿರುವುದು ಗಮನಾರ್ಹವಾಗಿದೆ. ಈ ನೇಮಕಾತಿಯು ರಾಜ್ಯದ ವಿವಿಧ ಭಾಷಾ ಸಂಸ್ಕೃತಿಗಳು, ಸಾಹಿತ್ಯ ಮತ್ತು ಕಲಾ ಕ್ಷೇತ್ರಗಳ ಸಾಧಕರನ್ನು ಗುರುತಿಸುವ ಪ್ರಕ್ರಿಯೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ