Featured, ಸ್ಥಳೀಯ

ಮಂಗಳೂರು: ಅಪ್ರಾಪ್ತ ಬಾಲಕರಿಗೆ ಲೈಂಗಿಕ ದೌರ್ಜನ್ಯ ಆರೋಪ; ವೆಲೆನ್ಸಿಯಾ ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಬಂಧನ

ಮಂಗಳೂರು, ಅ.18 (ಇವಾರ್ತೆ): ಚರ್ಚ್‌ಗೆ ಪ್ರಾರ್ಥನೆಗಾಗಿ ಬರುತ್ತಿದ್ದ ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಂಗಳೂರಿನ ವೆಲೆನ್ಸಿಯಾ ಚರ್ಚ್‌ನ ಧರ್ಮಗುರು ಫಾದರ್ ಸಿಪ್ರಿಯನ್ ಪಿಂಟೋ ಅವರನ್ನು ಪಾಂಡೇಶ್ವರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಸಿಪ್ರಿಯನ್ ಪಿಂಟೋ ಅವರನ್ನು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿರುವ ಸಂಬಂಧಿಕರ ಮನೆಯೊಂದರಲ್ಲಿ ಪತ್ತೆಹಚ್ಚಿ ಬಂಧಿಸಲಾಗಿದೆ. ಬಳಿಕ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಮಂಗಳೂರಿಗೆ ಕರೆತರಲಾಗಿದೆ.

ಚರ್ಚ್‌ಗೆ ನಿಯಮಿತವಾಗಿ ಭೇಟಿ ನೀಡುತ್ತಿದ್ದ ಅಪ್ರಾಪ್ತ ಬಾಲಕರಿಗೆ ಚಾಕೊಲೇಟ್ ನೀಡುವ ಮೂಲಕ ವಿಶ್ವಾಸ ಗಳಿಸಿ, ಬಳಿಕ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಬಾಲಕರಿಬ್ಬರು ನೀಡಿದ ದೂರಿನ ಆಧಾರದಲ್ಲಿ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳಿಂದ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ತಮಗಾದ ಕಿರುಕುಳದ ಕುರಿತು ಬಾಲಕರು ಪೋಷಕರಿಗೆ ತಿಳಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿತ್ತು. ಈ ವಿಚಾರವನ್ನು ಪೋಷಕರು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅವರ ಗಮನಕ್ಕೂ ತಂದಿದ್ದರು ಎನ್ನಲಾಗಿದೆ.

ಈ ನಡುವೆ, ಮೈಸೂರಿನ ಒಡನಾಡಿ ಸಂಸ್ಥೆಯ ಪ್ರತಿನಿಧಿಗಳು ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿ, ಪ್ರಕರಣದ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ ಸಂತ್ರಸ್ತ ಬಾಲಕರ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿತ್ತು.

ಪ್ರಕರಣ ದಾಖಲಾದ ಬೆನ್ನಲ್ಲೇ ಮಂಗಳೂರಿನಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆಗಾಗಿ ಪೊಲೀಸರು ಬೆಂಗಳೂರು ಸೇರಿದಂತೆ ವಿವಿಧೆಡೆ ಶೋಧ ನಡೆಸಿದ್ದರು. ಅಂತಿಮವಾಗಿ ಸಕಲೇಶಪುರದಲ್ಲಿ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಧರ್ಮಗುರುವನ್ನು ಕಾನೂನು ಪ್ರಕ್ರಿಯೆಗಳ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Related Posts