Featured, ಸ್ಥಳೀಯ

ಸಂಪಾಜೆ–ಕನಕಮಜಲು ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳು: ಸಮಗ್ರ ತಾಂತ್ರಿಕ ರಸ್ತೆ ಸುರಕ್ಷತಾ ಪರಿಶೀಲನೆಗೆ ಕೆ.ಎಂ. ಮುಸ್ತಫ ಆಗ್ರಹ

ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆ, ಸುಳ್ಯ ಹಾಗೂ ಕನಕಮಜಲು ವ್ಯಾಪ್ತಿಯಲ್ಲಿ ನಿರಂತರವಾಗಿ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಈಗಾಗಲೇ ಅನೇಕ ಅಮೂಲ್ಯ ಜೀವಗಳು ಬಲಿಯಾಗಿವೆ.!!!

ಸುಳ್ಯ: ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಸುಳ್ಯ ಮಾರ್ಗವಾಗಿ ಕನಕಮಜಲುವರೆಗಿನ ವ್ಯಾಪ್ತಿಯಲ್ಲಿ ನಿರಂತರವಾಗಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ತಜ್ಞರ ತಂಡದಿಂದ ಸಮಗ್ರ ತಾಂತ್ರಿಕ ರಸ್ತೆ ಸುರಕ್ಷತಾ ಪರಿಶೀಲನೆ (Technical Road Safety Audit) ನಡೆಸಿ, ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ (ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫ ಆಗ್ರಹಿಸಿದ್ದಾರೆ.

ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆ, ಸುಳ್ಯ ಹಾಗೂ ಕನಕಮಜಲು ವ್ಯಾಪ್ತಿಯಲ್ಲಿ ನಿರಂತರವಾಗಿ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಈಗಾಗಲೇ ಅನೇಕ ಅಮೂಲ್ಯ ಜೀವಗಳು ಬಲಿಯಾಗಿವೆ. ಹಲವರು ಗಂಭೀರ ಗಾಯಗಳಿಂದ ನರಳುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಜೀವ ರಕ್ಷಣೆ ಹಾಗೂ ಸುರಕ್ಷತೆಗೆ ಆದ್ಯತೆ ನೀಡಿ, ಹೆದ್ದಾರಿಯನ್ನು ಅನುಭವಿ ತಜ್ಞರ ತಂಡದಿಂದ ಸಮಗ್ರ ತಾಂತ್ರಿಕ ರಸ್ತೆ ಸುರಕ್ಷತಾ ಪರಿಶೀಲನೆಗೆ ಒಳಪಡಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಹೆದ್ದಾರಿಯಲ್ಲಿರುವ ಅಪಾಯಕಾರಿ ತಿರುವುಗಳು ಹಾಗೂ ಅಪಘಾತಗಳು ಹೆಚ್ಚಾಗಿ ಸಂಭವಿಸುವ ಸ್ಥಳಗಳನ್ನು ಗುರುತಿಸಿ, ವೈಜ್ಞಾನಿಕ ರೀತಿಯಲ್ಲಿ ಬ್ಲ್ಯಾಕ್ ಸ್ಪಾಟ್ ಟ್ರೀಟ್‌ಮೆಂಟ್ (Black Spot Treatment) ಕೈಗೊಳ್ಳಬೇಕು. ಕೇರಳ ಮಾದರಿಯಲ್ಲಿ ರಸ್ತೆ ಬದಿಗಳಲ್ಲಿ ಸುರಕ್ಷತಾ ತಡೆಗೋಡೆಗಳು, ಬ್ಯಾರಿಯರ್‌ಗಳು ಹಾಗೂ ಕರ್ಬ್‌ಗಳನ್ನು ಅಳವಡಿಸಬೇಕು. ಅಪಾಯಕಾರಿ ಸ್ಥಳಗಳಲ್ಲಿ ಸೂಕ್ತ ಎಚ್ಚರಿಕೆ ಮತ್ತು ಸೂಚನಾ ಫಲಕಗಳನ್ನು ಅಳವಡಿಸುವುದರ ಜೊತೆಗೆ, ತಿರುವುಗಳಲ್ಲಿ ಎದುರಿನಿಂದ ಬರುವ ವಾಹನಗಳು ಸ್ಪಷ್ಟವಾಗಿ ಗೋಚರಿಸುವಂತೆ ಅಗತ್ಯವಿರುವ ಕಡೆಗಳಲ್ಲಿ ಕಾನ್ವೆಕ್ಸ್ ಸುರಕ್ಷತಾ ಕನ್ನಡಿಗಳನ್ನು (Convex Safety Mirrors) ಅಳವಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಅಲ್ಲದೆ, ಬಸ್‌ಗಳು ಹೆದ್ದಾರಿಯಲ್ಲೇ ನಿಂತು ಪ್ರಯಾಣಿಕರನ್ನು ಹತ್ತಿಸುವ ಮತ್ತು ಇಳಿಸುವುದರಿಂದ ಉಂಟಾಗಬಹುದಾದ ಅಪಘಾತಗಳನ್ನು ತಡೆಗಟ್ಟಲು ಸೂಕ್ತ ಸ್ಥಳಗಳಲ್ಲಿ ಪ್ರತ್ಯೇಕ ಬಸ್ ಬೇ (Bus Bay) ನಿರ್ಮಿಸಬೇಕು. ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಇತರ ಅಗತ್ಯ ಕ್ರಮಗಳನ್ನೂ ತಜ್ಞರ ಶಿಫಾರಸಿನ ಆಧಾರದಲ್ಲಿ ಅನುಷ್ಠಾನಗೊಳಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರ ಜೀವ ರಕ್ಷಣೆ ಅತ್ಯಂತ ಮಹತ್ವದ್ದಾಗಿದ್ದು, ಮತ್ತಷ್ಟು ಪ್ರಾಣಹಾನಿ ಸಂಭವಿಸುವ ಮುನ್ನ ಸಂಬಂಧಪಟ್ಟ ಇಲಾಖೆಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸೂಡ ಅಧ್ಯಕ್ಷ ಕೆ.ಎಂ. ಮುಸ್ತಫ ಮನವಿ ಮೂಲಕ ಒತ್ತಾಯಿಸಿದ್ದಾರೆ.

Related Posts