Featured, ಇತರೆ

ಮಂಗಳೂರಿನಲ್ಲಿ ₹15.30 ಲಕ್ಷ ಮೌಲ್ಯದ ಎಂಡಿಎಂಎ ಡ್ರಗ್ಸ್ ಜಪ್ತಿ: ಮಹಿಳೆ ಬಂಧನ

ಮಾದಕವಸ್ತು ಪೂರೈಕೆ ಜಾಲದಲ್ಲಿ ಇನ್ನಷ್ಟು ಆರೋಪಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಅವರ ಪತ್ತೆ ಹಾಗೂ ಬಂಧನಕ್ಕಾಗಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಮಂಗಳೂರು: ಮಂಗಳೂರು ನಗರದ ವಿವಿಧೆಡೆ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾದಕವಸ್ತು ಪೂರೈಕೆ ಮಾಡುತ್ತಿದ್ದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದು, ಸುಮಾರು ₹15.30 ಲಕ್ಷ ಮೌಲ್ಯದ 153 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಮೂಲತಃ ಬೆಳ್ತಂಗಡಿ ತಾಲೂಕಿನ ಲಾಯಿಲ ನಿವಾಸಿಯಾಗಿದ್ದು, ಪ್ರಸ್ತುತ ಮಂಗಳೂರಿನ ಪಂಪ್‌ವೆಲ್ ಸಮೀಪದ ಉಜ್ಜೋಡಿಯ ರಾಧಾ ರೆಸಿಡೆನ್ಸಿ ವಸತಿ ಸಂಕೀರ್ಣದಲ್ಲಿ ವಾಸವಾಗಿದ್ದ ನಸೀಮಾ (42) ಎಂದು ಗುರುತಿಸಲಾಗಿದೆ.

ಅಕ್ಟೋಬರ್ 1ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಾದಕವಸ್ತು ಸೇವನೆ ಪ್ರಕರಣದ ತನಿಖೆಯ ವೇಳೆ ಆರೋಪಿಗಳಿಗೆ ಎಂಡಿಎಂಎ ಪೂರೈಕೆ ಮಾಡುತ್ತಿದ್ದ ಮಹಿಳೆಯ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಮಂಗಳೂರು ಉತ್ತರ ಠಾಣೆಯ ಪೊಲೀಸರು ನಸೀಮಾ ವಾಸವಿದ್ದ ಉಜ್ಜೋಡಿಯ ಅಪಾರ್ಟ್‌ಮೆಂಟ್‌ಗೆ ದಾಳಿ ನಡೆಸಿ, ಸುಮಾರು ₹15.30 ಲಕ್ಷ ಮೌಲ್ಯದ 153 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ಜಪ್ತಿ ಮಾಡಿ ಆಕೆಯನ್ನು ಬಂಧಿಸಿದ್ದಾರೆ.

ಬಂಧಿತ ಮಹಿಳೆ ಮಂಗಳೂರು ನಗರದ ವಿವಿಧೆಡೆ ಯುವಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾದಕವಸ್ತು ಮಾರಾಟ ಮಾಡುತ್ತಿದ್ದಳು ಎಂಬ ಮಾಹಿತಿ ವಿಚಾರಣೆಯ ವೇಳೆ ಲಭ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಾದಕವಸ್ತು ಪೂರೈಕೆ ಜಾಲದಲ್ಲಿ ಇನ್ನಷ್ಟು ಆರೋಪಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಅವರ ಪತ್ತೆ ಹಾಗೂ ಬಂಧನಕ್ಕಾಗಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ತಂಡ ಈ ಕಾರ್ಯಾಚರಣೆ ನಡೆಸಿದೆ.