Featured, ಇತರೆ

ಬಾಳುಗೋಡಿನ ಪದಕದಲ್ಲಿ ₹1.75 ಕೋಟಿ ವೆಚ್ಚದ ನೂತನ ಸೇತುವೆ ನಿರ್ಮಾಣಕ್ಕೆ ಗುದ್ದಲಿಪೂಜೆ

ಕಾಂಗ್ರೆಸ್ ಆಡಳಿತದಲ್ಲಿ ನಿರಂತರ ಅಭಿವೃದ್ಧಿ ಕಾರ್ಯಗಳು: ಭರತ್ ಮುಂಡೋಡಿ

ಸುಳ್ಯ: ಸುಳ್ಯ ತಾಲೂಕಿನ ಬಾಳುಗೋಡು ಗ್ರಾಮದ ಪದಕದಲ್ಲಿ ಹಳೆಯ ಮುಳುಗು ಸೇತುವೆಯ ಬದಲಿಗೆ ₹1.75 ಕೋಟಿ ವೆಚ್ಚದಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಲಾಯಿತು.

ಮಳೆಗಾಲದಲ್ಲಿ ಪದಕದ ಮುಳುಗು ಸೇತುವೆ ಜಲಾವೃತಗೊಂಡು ಸಾರ್ವಜನಿಕರ ಸುಗಮ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿತ್ತು. ಅಲ್ಲದೆ, ಹಳೆಯ ಸೇತುವೆ ಸಂಪೂರ್ಣ ಹಾನಿಗೊಳಗಾಗಿದ್ದ ಹಿನ್ನೆಲೆಯಲ್ಲಿ ನೂತನ ಸೇತುವೆ ನಿರ್ಮಿಸಬೇಕೆಂದು ಸ್ಥಳೀಯ ಗ್ರಾಮಸ್ಥರು ಹಾಗೂ ಬಾಳುಗೋಡು ಗ್ರಾಮ ಕಾಂಗ್ರೆಸ್ ಕಾರ್ಯಕರ್ತರು ಹಲವು ವರ್ಷಗಳಿಂದ ಬೇಡಿಕೆ ಮುಂದಿಟ್ಟಿದ್ದರು.

ಈ ಬೇಡಿಕೆಗೆ ಸ್ಪಂದಿಸಿದ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಕೆಪಿಸಿಸಿ ಸಂಯೋಜಕ ಕೃಷ್ಣಪ್ಪ ರಾಮಕುಂಜ ಅವರು ನೂತನ ಸೇತುವೆ ನಿರ್ಮಾಣಕ್ಕೆ ಅನುದಾನ ಒದಗಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ನಡೆಸಿದ್ದರು. ಅವರ ಪ್ರಯತ್ನ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರ ಶಿಫಾರಸು ಪತ್ರದ ಮೇರೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಅನುಮೋದನೆಯೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ₹1.75 ಕೋಟಿ ಅನುದಾನ ಬಿಡುಗಡೆಗೊಳಿಸಿದೆ ಎಂದು ಕಾರ್ಯಕ್ರಮದಲ್ಲಿ ತಿಳಿಸಲಾಯಿತು.

ನೂತನ ಸೇತುವೆ ನಿರ್ಮಾಣ ಕಾಮಗಾರಿಗೆ ದಕ್ಷಿಣ ಕನ್ನಡ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆ. ಜನಸಾಮಾನ್ಯರ ಮೂಲಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ ವಿಶೇಷ ಆದ್ಯತೆ ನೀಡುತ್ತಿದೆ. ಪದಕದ ಹಳೆಯ ಮುಳುಗು ಸೇತುವೆಯಿಂದಾಗಿ ಮಳೆಗಾಲದಲ್ಲಿ ಈ ಭಾಗದ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದರು. ಸೇತುವೆ ಹಾನಿಗೊಳಗಾಗಿದ್ದರಿಂದ ಸಾರ್ವಜನಿಕರ ಸಂಚಾರಕ್ಕೂ ಅಡಚಣೆಯಾಗುತ್ತಿತ್ತು. ಇದೀಗ ನೂತನ ಸೇತುವೆ ನಿರ್ಮಾಣಕ್ಕೆ ಅನುದಾನ ಮಂಜೂರಾಗಿರುವುದು ಈ ಭಾಗದ ಜನತೆಗೆ ಸಂತಸದ ವಿಚಾರವಾಗಿದೆ” ಎಂದು ಹೇಳಿದರು.

ಸೇತುವೆ ನಿರ್ಮಾಣಕ್ಕೆ ಅನುದಾನ ಒದಗಿಸಿದ ರಾಜ್ಯ ಸರ್ಕಾರಕ್ಕೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹಾಗೂ ಸೇತುವೆ ನಿರ್ಮಾಣಕ್ಕಾಗಿ ನಿರಂತರ ಶ್ರಮಿಸಿದ ಕೃಷ್ಣಪ್ಪ ರಾಮಕುಂಜ ಅವರಿಗೆ ಗ್ರಾಮಸ್ಥರ ಪರವಾಗಿ ಅಭಿನಂದನೆ ಸಲ್ಲಿಸಿದರು.

ನೂತನ ಸೇತುವೆ ನಿರ್ಮಾಣದಿಂದ ಮಳೆಗಾಲದಲ್ಲಿ ಎದುರಾಗುತ್ತಿದ್ದ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯುವ ನಿರೀಕ್ಷೆಯಿದ್ದು, ಈ ಭಾಗದ ಜನರ ಬಹುಕಾಲದ ಬೇಡಿಕೆ ಈಡೇರುವ ಹಂತ ತಲುಪಿದೆ.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು:

ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ದಯಾನಂದ ಕಟ್ಟೆಮನೆ, ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ಬಾಳುಗೋಡು ಗ್ರಾಮ ಕಾಂಗ್ರೆಸ್ ಸಮಿತಿಯ ಪ್ರಮುಖರಾದ ಶೈಲೇಶ್ ಕಟ್ಟೆಮನೆ, ಸದಾನಂದ ಬಾಳುಗೋಡು, ಆನಂದ ಬೆದ್ರುಪಣೆ, ದೇವಿದಾಸ ಕೊತ್ನಡ್ಕ, ಮಂಜುನಾಥ ಕಿರಿಭಾಗ, ಯುವ ಕಾಂಗ್ರೆಸ್ ಕಾರ್ಯದರ್ಶಿ ಜೀವನ್ ಮಿತ್ತಡ್ಕ, ಯುವ ಕಾಂಗ್ರೆಸ್ ಪ್ರಮುಖರಾದ ಪ್ರಮೋದ್ ಬಾಳುಗೋಡು, ಪ್ರಧಾನ್ ಕೂಜುಗೋಡು ಕಟ್ಟೆಮನೆ, ನವೀನ್ ವಾಡ್ಯಪ್ಪನಮನೆ, ಅಖಿನ್ ಬಾಳುಗೋಡು, ನಿರಣ್ ಬಾಳುಗೋಡು, ವಿಶ್ವನಾಥ ಪುಣೇರಿ, ಪುಟ್ಟಣ್ಣ ಪುಣೇರಿ, ಉದಯ ಕುಮಾರ್ ಪುಣೇರಿ, ಸುಕೇಶ್ ಬೆಟ್ಟುಮುಖಿ, ಜಾಣಪ್ಪ ಪುಣೇರಿ, ಗಣೇಶ್ ಪುಣೇರಿ, ಎಲ್ಲಪ್ಪ ಮುಂಡೋಕಜೆ, ರಾಮಚಂದ್ರ ಬೆಟ್ಟುಮುಖಿ, ಪುರುಷೋತ್ತಮ ಮಾನಡ್ಕ, ಭುವನಾ ವಿಶ್ವನಾಥ ಪುಣೇರಿ ಸೇರಿದಂತೆ ಹಲವಾರು ಗ್ರಾಮಸ್ಥರು ಉಪಸ್ಥಿತರಿದ್ದರು.

ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ ಸ್ವಾಗತಿಸಿದರು. ಯುವ ಕಾಂಗ್ರೆಸ್ ಕಾರ್ಯದರ್ಶಿ ಜೀವನ್ ಮಿತ್ತಡ್ಕ ವಂದಿಸಿದರು.

Related Posts