Featured, ಇತರೆ

ತಮಿಳುನಾಡು : ಸ್ಟಾಲಿನ್ ಅವರನ್ನು ಸೋಲಿಸಿದ್ದ ಟಿವಿಕೆ ಶಾಸಕ ವಿ.ಎಸ್. ಬಾಬು ನಿಧನ

ಸ್ಟಾಲಿನ್ ಅವರನ್ನು ಸೋಲಿಸಿದ್ದ ಮಾಜಿ ಡಿಎಂಕೆ ನಾಯಕ; ತಮಿಳುನಾಡಿನಲ್ಲಿ ಖಾಲಿ ವಿಧಾನಸಭಾ ಕ್ಷೇತ್ರಗಳ ಸಂಖ್ಯೆ 6ಕ್ಕೆ ಏರಿಕೆ

ಚೆನ್ನೈ, ನ.20: ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ವಿ.ಎಸ್. ಬಾಬು (75) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಎರಡು ತಿಂಗಳಿನಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೃದಯಾಘಾತದ ಬಳಿಕ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಬಾಬು ಅವರು ಈ ಹಿಂದೆ ಡಿಎಂಕೆಯ ಉತ್ತರ ಚೆನ್ನೈ ಜಿಲ್ಲಾ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. 2006ರಲ್ಲಿ ಪುರಸವಕ್ಕಂ ಕ್ಷೇತ್ರದಿಂದ ಡಿಎಂಕೆ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. 2011ರಲ್ಲಿ ಎಂ.ಕೆ. ಸ್ಟಾಲಿನ್ ಅವರು ಕೊಳತ್ತೂರು ಕ್ಷೇತ್ರದಿಂದ ಸ್ಪರ್ಧಿಸಿದ ಸಂದರ್ಭದಲ್ಲಿ ಬಾಬು ಚುನಾವಣಾ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದರು. ಆದರೆ, ಸ್ಟಾಲಿನ್ ಅವರ ಗೆಲುವಿನ ಅಂತರ ಕಡಿಮೆಯಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿತ್ತು.

ನಂತರ 2016ರಲ್ಲಿ ಎಐಎಡಿಎಂಕೆ ಸೇರ್ಪಡೆಗೊಂಡಿದ್ದ ಅವರು, ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. 2026ರ ಫೆಬ್ರವರಿಯಲ್ಲಿ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.

ಈ ನಡುವೆ, ಬಾಬು ಅವರ ಆರೋಗ್ಯದ ಸ್ಥಿತಿಗತಿ ಕುರಿತು ಮಾಹಿತಿ ನೀಡುವಂತೆ ಕೋರಿ ಅವರ ಕ್ಷೇತ್ರದ ಮತದಾರರೊಬ್ಬರು ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಬಾಬು ಅವರ ನಿಧನದೊಂದಿಗೆ ತಮಿಳುನಾಡು ವಿಧಾನಸಭೆಯಲ್ಲಿ ತೆರವಾಗಿರುವ ಕ್ಷೇತ್ರಗಳ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.