ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಇನ್ನೂ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ, ಸರ್ಕಾರವು ದಸರಾ ರಜೆಯನ್ನು ಅಕ್ಟೋಬರ್ 18ರವರೆಗೆ ವಿಸ್ತರಿಸಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಸಭೆಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು, ಸದಸ್ಯರು ಹಾಗೂ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸಮೀಕ್ಷೆ ಪೂರ್ಣಗೊಳ್ಳುವವರೆಗೆ ಶಿಕ್ಷಕರ ಸೇವೆಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ನಿರ್ಧಾರ ಮಾಡಲಾಗಿದೆ. ಇದರ ಹಿನ್ನೆಲೆ, ಅಕ್ಟೋಬರ್ 18ರವರೆಗೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ರಜೆಯನ್ನು ವಿಸ್ತರಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಹೇಳಿದರು: “ಕೊಪ್ಪಳ ಜಿಲ್ಲೆಯಲ್ಲಿ ಸಮೀಕ್ಷೆ ಶೇ.90ರಷ್ಟು ಮುಗಿದಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಶೇ.68-69ರಷ್ಟು ಕಾರ್ಯ ನಡೆದಿವೆ. ರಾಜ್ಯದಾದ್ಯಂತ ನಿರೀಕ್ಷಿತ ಮಟ್ಟದ ಪ್ರಗತಿ ಆಗಿಲ್ಲ. ಆದ್ದರಿಂದ, ಸಮೀಕ್ಷೆ ಪೂರ್ಣಗೊಳ್ಳುವವರೆಗೆ ಶಿಕ್ಷಕರ ಸಹಕಾರ ಅಗತ್ಯ,” ಎಂದರು.
ನಿನ್ನೆ ಶಿಕ್ಷಣ ಇಲಾಖೆ ಹೊರಡಿಸಿದ್ದ ಆದೇಶವನ್ನು ಹಿಂದುಳಿದ ಆಯೋಗದ ಸಲಹೆಯ ಮೇರೆಗೆ ತಿದ್ದುಪಡಿ ಮಾಡಲಾಗಿದೆ. ಶಿಕ್ಷಕರ ಸಂಘದ ಮನವಿಯಂತೆ ದಸರಾ ರಜೆಯನ್ನು ಇನ್ನೂ 10 ದಿನಗಳ ಕಾಲ ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಮುಂದಿನ 12 ವರ್ಕಿಂಗ್ ಡೇಸ್ ಒಳಗೆ ಸಮೀಕ್ಷೆ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ.
ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದವರ ವಿರುದ್ಧ ರಾಜ್ಯ ಸರ್ಕಾರ ಶಿಸ್ತಿನ ಕ್ರಮ ಕೈಗೊಳ್ಳುವುದಾಗಿ ಸಿಎಂ ಎಚ್ಚರಿಸಿದರು. ಅಕ್ಟೋಬರ್ 19ರೊಳಗೆ ಸಮಗ್ರ ಸಮೀಕ್ಷೆ ಮುಕ್ತಾಯಗೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದರು.
ಸಮೀಕ್ಷೆ ವೇಳೆ ಕರ್ತವ್ಯದಲ್ಲಿದ್ದ ಮೂವರು ಶಿಕ್ಷಕರು ಮೃತಪಟ್ಟಿದ್ದು, ಅವರಿಗೆ ತಲಾ ₹20 ಲಕ್ಷ ಪರಿಹಾರವನ್ನು ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.




m
