ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಪಾತ್ರ ತನಿಖೆಯಲ್ಲಿ ದೃಢ; 22 ಸಾವಿರ ಪುಟಗಳ ದಾಖಲೆ ನ್ಯಾಯಾಲಯಕ್ಕೆ ಸಲ್ಲಿಕೆ
ಬೆಂಗಳೂರು, ಡಿಸೆಂಬರ್ 13:
ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ಸಂಭವಿಸಿದ್ದು, ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ವಿಶೇಷ ತನಿಖಾ ತಂಡ (ಎಸ್ಐಟಿ) ಶುಕ್ರವಾರ ಬೆಂಗಳೂರು ನಗರದ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದೆ.
ಪ್ರಕರಣದಲ್ಲಿ ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಅವರ ಪುತ್ರ ಹರ್ಷಾನಂದ ಸೇರಿದಂತೆ ಒಟ್ಟು ಏಳು ಮಂದಿಯನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. 2023ರ ವಿಧಾನಸಭಾ ಚುನಾವಣೆಯ ವೇಳೆ ನಡೆದ ಮತಗಳ್ಳತನದಲ್ಲಿ ಸುಭಾಷ್ ಗುತ್ತೇದಾರ್ ಪಾತ್ರವಿದೆ ಎಂಬುದು ತನಿಖೆಯಿಂದ ಸಾಬೀತಾಗಿದೆ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.
ರಾಜ್ಯ ಸರ್ಕಾರದ ಆದೇಶದಂತೆ ಸಿಐಡಿ ಎಡಿಜಿಪಿ ಬಿಕೆ ಸಿಂಗ್ ನೇತೃತ್ವದಲ್ಲಿ ರಚಿಸಲಾದ ಎಸ್ಐಟಿ ತಂಡವು ಸಮಗ್ರ ತನಿಖೆ ನಡೆಸಿ, ಸುಮಾರು 22 ಸಾವಿರ ಪುಟಗಳ ಚಾರ್ಜ್ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.
ಪ್ರಕರಣದ ಹಿನ್ನೆಲೆ
2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂದು ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಆರೋಪಿಸಿದ್ದರು. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಲೋಕಸಭೆ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೂಡ ಈ ವಿಷಯವನ್ನು ಪ್ರಸ್ತಾಪಿಸಿ ಗಂಭೀರ ಆರೋಪ ಮಾಡಿದ್ದರು.
ಸಾವಿರಾರು ಮತದಾರರ ಹೆಸರು ಅಳಿಕೆ ಪತ್ತೆ !?
ತನಿಖೆಯ ವೇಳೆ ಆಳಂದ ಕ್ಷೇತ್ರದಲ್ಲಿ 5,994 ಮತದಾರರ ಹೆಸರುಗಳು ಮತದಾರರ ಪಟ್ಟಿಯಿಂದ ಅಳಿಸಲ್ಪಟ್ಟಿರುವುದು ಬೆಳಕಿಗೆ ಬಂದಿದೆ. ಮತದಾರರ ಹೆಸರು ಅಳಿಸಲು ಸೈಬರ್ ಸೆಂಟರ್ಗಳನ್ನು ಬಳಸಿಕೊಂಡು ಹಣ ಪಾವತಿ ಮಾಡಲಾಗಿದೆ ಎಂಬ ಆರೋಪವೂ ತನಿಖೆಯಲ್ಲಿ ಹೊರಬಿದ್ದಿದೆ
ಪ್ರತಿ ಮತ ಅಳಿಕೆಗೆ 80 ರೂ. ಪಾವತಿ ಆರೋಪ .!!
ಪ್ರಕರಣದಲ್ಲಿ ಪ್ರತಿ ಮತದಾರರ ಹೆಸರು ಅಳಿಸಲು 80 ರೂ. ಹಣ ಪಾವತಿಸಲಾಗಿದೆ ಎಂಬ ಆರೋಪವಿದ್ದು, 2022ರ ಡಿಸೆಂಬರ್ನಿಂದ 2023ರ ಫೆಬ್ರವರಿವರೆಗೆ 6,018 ಮತಗಳ ರದ್ದತಿಗೆ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಲಾಗಿತ್ತು ಎಂದು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ. ಮತಗಳ್ಳತನಕ್ಕೆ ಸಂಬಂಧಿಸಿದಂತೆ ಹಣ ಪಾವತಿ ಮಾಡಿದ ಆರೋಪವನ್ನು ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ವಿರುದ್ಧ ಚಾರ್ಜ್ಶೀಟ್ನಲ್ಲಿ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

