ಸಂಪಾಜೆ: ಗ್ರಾಮಗಳ ಸಮಗ್ರ ಅಭಿವೃದ್ಧಿಯ ಮೂಲಕ ಗಾಂಧೀಜಿಯವರ “ರಾಮಸ್ವರಾಜ್ಯ” ಕನಸನ್ನು ನನಸು ಮಾಡುವ ದಿಸೆಯಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ದೇಶಕ್ಕೆ ಮಾದರಿಯಾಗಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು.
ಅವರು ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿ ವಿಶೇಷ ಅನುದಾನದಡಿ ನಿರ್ಮಿಸಲಾದ ಸರ್ವ ಋತು ಕಾಂಕ್ರೀಟ್ ರಸ್ತೆಗಳು ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ಅವರ ವಿಶೇಷ ಮುತುವರ್ಜಿಯಿಂದ ಮುಖ್ಯಮಂತ್ರಿ ವಿಶೇಷ ಅನುದಾನ, ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಎಂಎಲ್ಸಿ ಅನುದಾನ, ಜಿಲ್ಲಾ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಸ್ವಂತ ನಿಧಿಗಳಡಿ ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳು ಪೂರ್ಣಗೊಂಡಿವೆ.
ಈ ಸಂದರ್ಭದಲ್ಲಿ ಸುಮಾರು 500ಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೃಷಿ ಉಪಕರಣಗಳು, ಹೊಲಿಗೆ ಯಂತ್ರಗಳು ಸೇರಿದಂತೆ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು. ಜೊತೆಗೆ ಪ್ರಾಥಮಿಕ ಶಾಲಾ ಗ್ರಂಥಾಲಯ, ಅಕ್ಷರ ದಾಸೋಹ ಕಟ್ಟಡ, ನೂತನ ಗ್ರಂಥಾಲಯ, ಸುಸಜ್ಜಿತ ಅಂಗನವಾಡಿ ಹಾಗೂ ವಿಸ್ತೃತ ಕಟ್ಟಡಗಳ ಉದ್ಘಾಟನೆ ನೆರವೇರಿತು.
ಸಮಾರಂಭದ ಅಧ್ಯಕ್ಷತೆಯನ್ನು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಮತಿ ಶಕ್ತಿವೇಲು ವಹಿಸಿದ್ದರು.
ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಟಿ.ಎಂ. ಶಹೀದ್ ತೆಕ್ಕಿಲ್ ಅವರು, ಸಂಪಾಜೆ ಗ್ರಾಮವು ಸರ್ವಧರ್ಮ ಸೌಹಾರ್ದತೆಯ ಪ್ರತೀಕವಾಗಿದ್ದು, ಪಕ್ಷಭೇದ ಮತ್ತು ಜಾತಿಭೇದ ಮರೆತು ಒಂದಾದರೆ ಗ್ರಾಮಗಳ ಅಭಿವೃದ್ಧಿ ಹೇಗೆ ಸಾಧ್ಯ ಎಂಬುದನ್ನು ತೋರಿಸಿದೆ. ಮುಂದೆಯೂ ಸಂಪೂರ್ಣ ಸಹಕಾರ ನೀಡುವುದಾಗಿ ಅವರು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಪರಿಸರ ಪ್ರವಾಸೋದ್ಯಮ ಮಂಡಳಿ ಅಧ್ಯಕ್ಷೆ ಶ್ರೀಮತಿ ಶಾಲೆಟ್ ಪಿಂಟೋ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಾಮೊಟ್ಟೆ, ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ.ಎಂ. ಮುಸ್ತಫ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಓಲ್ಗಾ ಡಿ’ಸೋಜಾ, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯಕ್ರಮ ನಿರ್ವಾಹಕ ಇಂಜಿನಿಯರ್ ಫಯಾಜ್ ಅಹ್ಮದ್, ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಇಂಜಿನಿಯರ್ ಶ್ರೀಮತಿ ಚೈತ್ರಾ ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ.ಕೆ. ಹಮೀದ್ ಸ್ವಾಗತಿಸಿದರು. ಉಪಾಧ್ಯಕ್ಷ ಎಸ್.ಕೆ. ಹನೀಫ್ ವಂದಿಸಿದರು.

