ಬೆಳ್ತಂಗಡಿ: ತಾಲೂಕಿನ ಬಳೆಂಜ ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ಶಾಲೆಯ ಆಡಳಿತ ಮಂಡಳಿಯವರು ಶಾಲಾ ಮಕ್ಕಳನ್ನು ಟಿಪ್ಪರ್ ಹಾಗೂ ಪಿಕಪ್ ವಾಹನಗಳಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋದ ಘಟನೆ ಅತ್ಯಂತ ಆತಂಕಕಾರಿ ಮತ್ತು ನಿರ್ಲಕ್ಷ್ಯ ಪೂರ್ಣವಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಎಂಬುದು ಪ್ರಾಥಮಿಕ ಜವಾಬ್ದಾರಿಯಾಗಿದ್ದರೂ, ಜೀವಕ್ಕೆ ಅಪಾಯಕಾರಿಯಾದ ಇಂತಹ ಸರಕು ಸಾಗಣೆ ವಾಹನಗಳನ್ನು ಬಳಸಿರುವುದು ಗಂಭೀರ ಅಪರಾಧವಾಗಿದೆ ಎಂದು ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಉಪಾಧ್ಯಕ್ಷ ನಿಸಾರ್ ಕುದ್ರಡ್ಕ ತೀವ್ರವಾಗಿ ಖಂಡಿಸಿದ್ದಾರೆ.
ಮಕ್ಕಳ ಸುರಕ್ಷತೆ ಕುರಿತಂತೆ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಿರುವ ಸಂದರ್ಭದಲ್ಲೂ, ಅದನ್ನು ಸಂಪೂರ್ಣವಾಗಿ ಲೆಕ್ಕಿಸದೆ ಈ ರೀತಿಯ ಬೇಜವಾಬ್ದಾರಿಯುತ ಕ್ರಮ ಕೈಗೊಂಡಿರುವುದು ಅಕ್ಷಮ್ಯ ಅಪರಾಧವಾಗಿದೆ. ಪ್ರವಾಸದ ಸಮಯದಲ್ಲಿ ಒಂದು ವೇಳೆ ಅಚಾತುರ್ಯ ಸಂಭವಿಸಿ ಯಾವುದೇ ಅಪಾಯ ಅಥವಾ ಅಪಘಾತ ನಡೆದಿದ್ದರೆ ಅದರ ಹೊಣೆಗಾರಿಕೆಯನ್ನು ಯಾರು ಹೊರುತ್ತಿದ್ದರು ಎಂದು ಅವರು ಪ್ರಶ್ನಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಕ್ಷಣ ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ, ಮಕ್ಕಳ ಪ್ರಾಣದ ಜೊತೆ ಚೆಲ್ಲಾಟವಾಡಿದ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಅಪಾಯಕಾರಿ ನಿರ್ಲಕ್ಷ್ಯಗಳು ಮರುಕಳಿಸದಂತೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಬೇಕು ಹಾಗೂ ಶಾಲಾ ಮಕ್ಕಳ ಸುರಕ್ಷತೆಯ ಮಾರ್ಗಸೂಚಿಗಳನ್ನು ಪ್ರತಿಯೊಂದು ಶಾಲೆಯು ಕಡ್ಡಾಯವಾಗಿ ಪಾಲಿಸುವಂತೆ ನೋಡಿಕೊಳ್ಳಬೇಕು ಎಂದು ಅವರು ಈ ಮೂಲಕ ಒತ್ತಾಯಿಸಿದ್ದಾರೆ.
