ಬಂಟ್ವಾಳ: ಸಂವಿಧಾನ ವಿರೋಧಿ ಮತ್ತು ದೇಶದ್ರೋಹಿ ಚಟುವಟಿಕೆಗಳಿಗೆ ಕರೆ ನೀಡುವ ‘ಹಿಂದೂ ರಾಷ್ಟ್ರ ನಿರ್ಮಾಣ’ ಕಾರ್ಯಕ್ರಮದ ಅನುಮತಿಯನ್ನು ನಿರಾಕರಿಸಬೇಕು ಹಾಗೂ ಆಯೋಜಕರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಫೆಬ್ರವರಿ 22 ರಂದು ಬಂಟ್ವಾಳದ ಅರಳದ ಶ್ರೀ ಗರುಡ ಮಹಾಕಾಳಿ ದೇವಸ್ಥಾನದ ಸಭಾಗ್ರಹದಲ್ಲಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಆಯೋಜಿಸಲು ಉದ್ದೇಶಿಸಿರುವ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಕರಪತ್ರಗಳ ಮೂಲಕ ಪ್ರಚಾರ ಮಾಡಲಾಗುತ್ತಿದೆ. ಈ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಭಾರತದ ಸಂವಿಧಾನವು ದೇಶವನ್ನು ಜಾತ್ಯತೀತ ರಾಷ್ಟ್ರವೆಂದು ಸ್ಪಷ್ಟವಾಗಿ ಉಲ್ಲೇಖಿಸಿದೆ. ಯಾವುದೇ ಧರ್ಮ ಅಥವಾ ಜಾತಿಯ ಹೆಸರಿನಲ್ಲಿ ರಾಷ್ಟ್ರವನ್ನು ಗುರುತಿಸುವುದು ಸಂವಿಧಾನದ ಉಲ್ಲಂಘನೆ ಮತ್ತು ದೇಶದ್ರೋಹದ ಅಪರಾಧವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಶಾಂತಿಯುತವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸೌಹಾರ್ದತೆಯನ್ನು ಕೆಡಿಸಲು ಮತ್ತು ಸಮಾಜದಲ್ಲಿ ಆತಂಕ ಸೃಷ್ಟಿಸಲು ಇಂತಹ ಸಮಾಜದ್ರೋಹಿ ಸಂಘಟನೆಗಳು ಕಾರ್ಯಪ್ರವೃತ್ತವಾಗಿವೆ. ಆದ್ದರಿಂದ ಈ ಕಾರ್ಯಕ್ರಮವನ್ನು ಕೂಡಲೇ ತಡೆಹಿಡಿಯಬೇಕು ಮತ್ತು ಸಂವಿಧಾನ ವಿರೋಧಿ ಕಾರ್ಯಕ್ರಮ ಆಯೋಜಿಸಿರುವ ಸಂಘಟನೆಯ ನಾಯಕರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.
ಈ ವೇಳೆ ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷ ಶಾಹುಲ್ ಎಸ್ ಎಚ್, ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ, ಕಬೀರ್ ಅಕ್ಕರಂಗಡಿ, ಇಮ್ರಾನ್ ಬಂಟ್ವಾಳ, ಉಬೈದ್ ಬಂಟ್ವಾಳ ಉಪಸ್ಥಿತರಿದ್ದರು.
