ಹೋರಾಟ ಮುನ್ನಡೆಸಿದ ನಾಯಕನೇ ಮುಖ್ಯಮಂತ್ರಿ ಆಗಲಿ : ಸತೀಶನ್ ಪರ ಕಾರ್ಯಕರ್ತರ ಘೋಷಣೆ
ಕೇರಳ ವಿಧಾನಸಭಾ ಚುನಾವಣೆಯಲ್ಲಿ UDF ಭರ್ಜರಿ ಜಯ ಸಾಧಿಸಿದ ಬೆನ್ನಲ್ಲೇ, ವಿರೋಧ ಪಕ್ಷದ ನಾಯಕ ವಿ. ಡಿ. ಸತೀಶನ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಘೋಷಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ಮತ್ತು ಸಾರ್ವಜನಿಕ ಸಭೆಗಳನ್ನು ನಡೆಸಿದರು.
ಗುರುವಾರ ಸಂಜೆ ಸತೀಶನ್ ಬೆಂಬಲಿಗರು ಬೀದಿಗಿಳಿದು, “ಹೋರಾಟದ ನೇತೃತ್ವ ವಹಿಸಿದ ನಾಯಕ ರಾಜ್ಯ ಮುನ್ನಡೆಸಲಿ” ಎಂಬ ಘೋಷಣೆಗಳನ್ನು ಕೂಗಿದರು. ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಎರ್ನಾಕುಲಂ, ತ್ರಿಶೂರ್, ಕೋಝಿಕ್ಕೋಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಮೆರವಣಿಗೆ ಹಾಗೂ ಸಭೆಗಳನ್ನು ಆಯೋಜಿಸಿ ಸತೀಶನ್ ಪರ ಬೆಂಬಲ ವ್ಯಕ್ತಪಡಿಸಿದರು.
ಇದೀಗ ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ನಾಯಕತ್ವಕ್ಕೆ ತೀವ್ರ ತಲೆನೋವಾಗಿ ಪರಿಣಮಿಸಿದೆ. ಹತ್ತು ವರ್ಷಗಳ ಕಾಲ ಅಧಿಕಾರದಿಂದ ದೂರವಿದ್ದ ಕಾಂಗ್ರೆಸ್ ನೇತೃತ್ವದ UDF ಮೈತ್ರಿಕೂಟವು ಈ ಬಾರಿ 100ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಲು ಸಜ್ಜಾಗಿದೆ.
ಈ ಗೆಲುವಿನ ಹಿಂದೆ ಪ್ರಮುಖ ಪಾತ್ರವಹಿಸಿದ್ದವರು ವಿ. ಡಿ. ಸತೀಶನ್ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ. ರಾಜ್ಯಾದ್ಯಂತ ವ್ಯಾಪಕ ಪ್ರವಾಸ ಕೈಗೊಂಡು ಪಕ್ಷವನ್ನು ಪುನರ್‌ಸಂಘಟಿಸುವಲ್ಲಿ ಅವರು ಯಶಸ್ವಿಯಾಗಿದ್ದು, ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದ್ದರು ಎನ್ನಲಾಗಿದೆ.
ಆದರೆ ಇದೀಗ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಾಂಗ್ರೆಸ್ ಒಳಗೇ ತೀವ್ರ ಪೈಪೋಟಿ ಆರಂಭವಾಗಿದೆ. ಹಿರಿಯ ನಾಯಕ ರಮೇಶ್ ಚೆನ್ನಿತ್ತಲ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದ್ದು, ಮತ್ತೊಂದೆಡೆ ಕೆ. ಸಿ. ವೇಣುಗೋಪಾಲ್ ಅವರಿಗೂ ಬಲವಾದ ಬೆಂಬಲ ವ್ಯಕ್ತವಾಗುತ್ತಿದೆ. ಇದೇ ವೇಳೆ ಶಶಿ ತರೂರ್ ಅವರ ಹೆಸರೂ ಮುಖ್ಯಮಂತ್ರಿ ರೇಸ್‌ನಲ್ಲಿ ಚರ್ಚೆಗೆ ಗ್ರಾಸವಾಗಿದೆ.
ದಿನದಿಂದ ದಿನಕ್ಕೆ ಮುಖ್ಯಮಂತ್ರಿ ಅಭ್ಯರ್ಥಿಗಳ ಪಟ್ಟಿ ವಿಸ್ತರಿಸುತ್ತಿರುವುದರಿಂದ ಕಾಂಗ್ರೆಸ್ ಹೈಕಮಾಂಡ್‌ಗೆ ಅಂತಿಮ ನಿರ್ಧಾರ ಕೈಗೊಳ್ಳುವುದು ಸವಾಲಾಗಿ ಪರಿಣಮಿಸಿದೆ. ಪಕ್ಷದ ಹಿರಿಯ ನಾಯಕರು ಹಾಗೂ ಮೈತ್ರಿ ಪಕ್ಷಗಳ ಜೊತೆ ಚರ್ಚೆ ನಡೆಸಿದ ಬಳಿಕವೇ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಘೋಷಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.




m
