ನವದೆಹಲಿ : ನವದೆಹಲಿ : ದೇಶದ ಸುಮಾರು 24 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಗಂಭೀರ ಹೊಡೆತ ಬೀರಿದ ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ಆರೋಪಗಳ ಹಿನ್ನೆಲೆ ದೇಶಾದ್ಯಂತ ಚರ್ಚೆ ತೀವ್ರಗೊಂಡಿರುವ ನಡುವೆಯೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಈ ವಿಷಯಕ್ಕೆ ಸಂಬಂಧಿಸಿದ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದ್ದಾರೆ.
ಸಿಐಐ (Confederation of Indian Industry) ಶೃಂಗಸಭೆಯಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳು ನೀಟ್-ಯುಜಿ ಪರೀಕ್ಷೆ ರದ್ದು ಹಾಗೂ ಮರುಪರೀಕ್ಷೆ ಕುರಿತಾಗಿ ಪ್ರಶ್ನೆ ಕೇಳಲು ಮುಂದಾದರು. ಆದರೆ, ಸಚಿವರು ಈ ವಿಚಾರದ ಕುರಿತು ಯಾವುದೇ ಪ್ರತಿಕ್ರಿಯೆ ನೀಡದೇ ಅಲ್ಲಿಂದ ನಿರ್ಗಮಿಸಿದರು ಎಂದು ವರದಿಯಾಗಿದೆ.
ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿವಿಧ ರಾಜ್ಯಗಳಲ್ಲಿ ಪರೀಕ್ಷಾ ಅಕ್ರಮಗಳ ಆರೋಪಗಳು ಕೇಳಿಬಂದ ಹಿನ್ನೆಲೆ, ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ವಿರುದ್ಧ ವಿರೋಧ ಪಕ್ಷಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿವೆ. ಇದೇ ವೇಳೆ, ನೀಟ್-ಯುಜಿ ಪರೀಕ್ಷೆ ರದ್ದುಪಡಿಸಿ ಮರುಪರೀಕ್ಷೆ ನಡೆಸುವ ಕುರಿತು ಕೇಂದ್ರ ಸರ್ಕಾರ ಶೀಘ್ರದಲ್ಲೇ ಅಧಿಕೃತ ನಿರ್ಧಾರ ಪ್ರಕಟಿಸಬಹುದೆಂಬ ನಿರೀಕ್ಷೆ ವ್ಯಕ್ತವಾಗಿದೆ.
ಈ ಬೆಳವಣಿಗೆ ನಡುವೆ, ಶಿಕ್ಷಣ ವ್ಯವಸ್ಥೆಯ ಪಾರದರ್ಶಕತೆ ಹಾಗೂ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳ ವಿಶ್ವಾಸಾರ್ಹತೆ ಕುರಿತು ಮತ್ತೊಮ್ಮೆ ಪ್ರಶ್ನೆಗಳು ಉದ್ಭವಿಸಿವೆ.




m
