Featured, ಸ್ಥಳೀಯ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಸುಳ್ಯದಲ್ಲಿ ನಾಳೆ ಪ್ರತಿಭಟನಾ ರ‍್ಯಾಲಿ

ಶಿಕ್ಷಣ ವ್ಯವಸ್ಥೆಯ ಪಾರದರ್ಶಕತೆಗೆ ಒತ್ತಾಯ; ವಿದ್ಯಾರ್ಥಿಗಳ ಭವಿಷ್ಯ ರಕ್ಷಣೆಗೆ ಎಸ್ಸೆಸ್ಸೆಫ್ ಕರೆ

ಸುಳ್ಯ, ಮೇ 14 : ದೇಶವ್ಯಾಪಿ ಚರ್ಚೆಗೆ ಕಾರಣವಾಗಿರುವ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ, ಶಿಕ್ಷಣ ಕ್ಷೇತ್ರದಲ್ಲಿ ಪಾರದರ್ಶಕತೆ ಹಾಗೂ ನ್ಯಾಯಸಮ್ಮತ ವ್ಯವಸ್ಥೆಯನ್ನು ಒತ್ತಾಯಿಸಿ ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ವತಿಯಿಂದ ಮೇ 15ರಂದು ಪ್ರತಿಭಟನಾ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ.
ಶುಕ್ರವಾರ ಸಂಜೆ 4 ಗಂಟೆಗೆ ಸುಳ್ಯದ ಗಾಂಧಿನಗರ ಪೆಟ್ರೋಲ್ ಬಂಕ್‌ನಿಂದ ಆರಂಭಗೊಳ್ಳುವ ಈ ಪ್ರತಿಭಟನಾ ರ‍್ಯಾಲಿ, ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗುತ್ತಾ ಬಸ್ ಸ್ಟ್ಯಾಂಡ್‌ನಲ್ಲಿ ಸಮಾಪನಗೊಳ್ಳಲಿದೆ.
ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯು ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುವ ಗಂಭೀರ ಅಕ್ರಮವಾಗಿದ್ದು, ಪ್ರಾಮಾಣಿಕವಾಗಿ ಶ್ರಮಿಸಿ ಪರೀಕ್ಷೆಗೆ ಸಿದ್ಧರಾಗುವ ವಿದ್ಯಾರ್ಥಿಗಳಿಗೆ ಇದು ಭಾರೀ ಅನ್ಯಾಯವಾಗುತ್ತಿದೆ ಎಂದು ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ.
“ಒಂದು ಪ್ರಶ್ನೆಪತ್ರಿಕೆಯನ್ನು ಸುರಕ್ಷಿತವಾಗಿ ಕಾಪಾಡಲು ವಿಫಲವಾಗುವ ವ್ಯವಸ್ಥೆ, ವಿದ್ಯಾರ್ಥಿಗಳ ಕನಸುಗಳಿಗೆ ನ್ಯಾಯ ಒದಗಿಸಬಹುದೇ ಎಂಬ ಪ್ರಶ್ನೆ ಇಂದು ದೇಶದಾದ್ಯಂತ ಉದ್ಭವಿಸಿದೆ. ಶಿಕ್ಷಣ ಕ್ಷೇತ್ರದ ವಿಶ್ವಾಸಾರ್ಹತೆಯನ್ನು ಉಳಿಸಿಕೊಳ್ಳಲು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಸಂಘಟನೆ ಹೇಳಿದೆ.
ಶಿಕ್ಷಣ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ, ಅಕ್ರಮ ಹಾಗೂ ನಿರ್ಲಕ್ಷ್ಯಗಳಿಗೆ ಅವಕಾಶವಿಲ್ಲದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳ ಭವಿಷ್ಯ ಯಾವುದೇ ರಾಜಕೀಯಕ್ಕಿಂತ ದೊಡ್ಡದು ಎಂಬ ಸಂದೇಶವನ್ನು ಸಮಾಜಕ್ಕೆ ತಲುಪಿಸುವ ಉದ್ದೇಶದಿಂದ ಈ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ತಿಳಿಸಲಾಗಿದೆ.
ಪ್ರತಿಭಟನಾ ರ‍್ಯಾಲಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಅಧ್ಯಕ್ಷ ರಿಯಾನ್ ಸಅದಿ ಬೆಳ್ಳಾರೆ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
m

Related Posts