ಬೆಂಗಳೂರು, ಜೂನ್ 3: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಲೋಕಭವನದ ಗಾಜಿನ ಮನೆ ವೇದಿಕೆಯಲ್ಲಿ ನಡೆದ ಸರಳ ಹಾಗೂ ಸಂಭ್ರಮದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಸಂಜೆ 4.05 ಗಂಟೆಗೆ ತಾನು ಅತ್ಯಂತ ಗೌರವಿಸುವ ಗಂಗಾಧರ ಅಜ್ಜಯ್ಯ ಅವರ ಹೆಸರನ್ನು ಸ್ಮರಿಸಿ ವೇದಿಕೆಯಲ್ಲಿ ದೀರ್ಘ ದಂಡ ನಮಸ್ಕಾರ ಸಲ್ಲಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲರಾದ ಗೆಹ್ಲೋಟ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ಸಮಾರಂಭದಲ್ಲಿ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸಿಂಗ್ ಸುರ್ಜೇವಾಲಾ, ಕೆ.ಸಿ. ವೇಣುಗೋಪಾಲ್ ಸೇರಿದಂತೆ ಹಲವು ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ನಾಯಕರು ಉಪಸ್ಥಿತರಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿವಿಧ ಧರ್ಮಗುರುಗಳು, ಸಿನಿತಾರೆಯರು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾಂಗ್ರೆಸ್ ಕಾರ್ಯಕರ್ತರ ಜಯಘೋಷ ಮತ್ತು ಸಂಭ್ರಮದ ನಡುವೆ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕೊಡಗಿನ ಶಾಸಕರಾದ ಎ.ಎಸ್. ಪೊನ್ನಣ್ಣ ಹಾಗೂ ಡಾ. ಮಂಥರ್ ಗೌಡ ಅವರು ನೂತನ ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸಿದರು. ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಎಲ್‌ಇಡಿ ಪರದೆಗಳ ಮೂಲಕ ಪದಗ್ರಹಣ ಸಮಾರಂಭವನ್ನು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ವೀಕ್ಷಿಸಿದರು.
ಇದೇ ವೇಳೆ ರಾಜ್ಯದ ಏಕೈಕ ಉಪಮುಖ್ಯಮಂತ್ರಿಯಾಗಿ ಡಾ. ಜಿ. ಪರಮೇಶ್ವರ್ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಕಾರ್ಯಕ್ರಮ ಆರಂಭಕ್ಕೂ ಮುನ್ನ ವಂದೇ ಮಾತರಂ ಹಾಗೂ ನಾಡಗೀತೆ ಗಾಯನ ನಡೆಯಿತು. ಪೊಲೀಸ್ ಬ್ಯಾಂಡ್‌ನ ಗೌರವ ವಂದನೆಯೊಂದಿಗೆ ಸಮಾರಂಭಕ್ಕೆ ವಿಶೇಷ ಮೆರುಗು ದೊರೆಯಿತು.





m
