ಬೆಂಗಳೂರು, ಜೂ.14: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳಲ್ಲಿ ದುರ್ಬಳಕೆ ಹಾಗೂ ಸೋರಿಕೆ ತಡೆಯುವ ಉದ್ದೇಶದಿಂದ ಫಲಾನುಭವಿಗಳಿಂದ ಮತ್ತೊಮ್ಮೆ ಅರ್ಜಿ ಆಹ್ವಾನಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶನಿವಾರ ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಓ) ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ನಡೆದ ರಾಜ್ಯ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.
ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಅವುಗಳ ಪರಿಣಾಮಕಾರಿತ್ವದ ಕುರಿತು ಸುದೀರ್ಘ ಚರ್ಚೆ ನಡೆಯಿತು. ಈ ವೇಳೆ ಗೃಹಲಕ್ಷ್ಮಿ ಯೋಜನೆಯ ನೂರಾರು ಕೋಟಿ ರೂಪಾಯಿ ಅನರ್ಹ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿರುವ ಬಗ್ಗೆ ಗಮನ ಸೆಳೆಯಲಾಯಿತು.
ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಮರು ಅರ್ಜಿ ಆಹ್ವಾನಿಸಿ ಅರ್ಹ ಫಲಾನುಭವಿಗಳನ್ನು ಮರುಪರಿಶೀಲನೆ ಮಾಡುವಂತೆ ಸೂಚಿಸಲಾಗಿದೆ. ಇದೇ ಮಾದರಿಯಲ್ಲಿ ಗೃಹಜ್ಯೋತಿ ಯೋಜನೆಯಲ್ಲಿಯೂ ಹೊಸದಾಗಿ ಅರ್ಜಿಗಳನ್ನು ಸ್ವೀಕರಿಸಿ, ಅನರ್ಹರನ್ನು ಗುರುತಿಸಿ ಯೋಜನೆಯ ದುರ್ಬಳಕೆ ತಡೆಯುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ರಾಜ್ಯದ ಪಂಚ ಗ್ಯಾರಂಟಿ ಯೋಜನೆಗಳಲ್ಲೂ ಸೋರಿಕೆ ಮತ್ತು ದುರ್ಬಳಕೆಗೆ ಅವಕಾಶ ನೀಡಬಾರದು. ಯೋಜನೆಗಳ ಲಾಭ ನಿಜವಾದ ಅರ್ಹರಿಗೆ ಮಾತ್ರ ತಲುಪುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.




m
