ಇತರೆ, ಸ್ಥಳೀಯ

ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿರ್ಧಾರ ಸ್ವಾಗತಾರ್ಹ : ಎಸ್‌ಡಿಪಿಐ

ಪುತ್ತೂರು ಜಿಲ್ಲಾ ರಚನೆ, ಬ್ಯಾರಿ ಅಭಿವೃದ್ಧಿ ನಿಗಮ, ರಸ್ತೆ, ಪ್ರವಾಸೋದ್ಯಮ, ಕೃಷಿ-ಮೀನುಗಾರಿಕೆ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ತೀರ್ಮಾನ ಕೈಗೊಳ್ಳುವಂತೆ ಆಗ್ರಹ

ಮಂಗಳೂರು, ಜೂನ್ 18: ರಾಜ್ಯ ಸರ್ಕಾರದ ಮುಂದಿನ ಸಚಿವ ಸಂಪುಟ ಸಭೆಯನ್ನು ಕರಾವಳಿಯ ರಾಜಧಾನಿ ಮಂಗಳೂರಿನಲ್ಲಿ ನಡೆಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೈಗೊಂಡಿರುವ ನಿರ್ಧಾರವನ್ನು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಸ್ವಾಗತಿಸಿದ್ದಾರೆ.

ಆಡಳಿತ ವ್ಯವಸ್ಥೆಯನ್ನು ಜನಸಾಮಾನ್ಯರ ಬಾಗಿಲಿಗೆ ತಲುಪಿಸುವ ಈ ಕ್ರಮವು ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಮಹತ್ವದ ಹೆಜ್ಜೆಯಾಗಲಿ ಎಂದು ಅವರು ಆಶಿಸಿದ್ದಾರೆ.

ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯು ಕೇವಲ ಔಪಚಾರಿಕ ಸಭೆಯಾಗದೆ, ಕರಾವಳಿ ಭಾಗದ ಜನರ ಬಹುಕಾಲದ ಬೇಡಿಕೆಗಳಿಗೆ ಸ್ಪಂದಿಸುವ ವೇದಿಕೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರಗಳು ನಿರ್ಲಕ್ಷ್ಯ ತೋರಿರುವುದರಿಂದ ಜನರಲ್ಲಿ ಅಸಮಾಧಾನ ಮನೆಮಾಡಿದೆ. ಜಿಲ್ಲೆಯ ಇಬ್ಬರು ನಾಯಕರು ಮುಖ್ಯಮಂತ್ರಿಗಳಾಗಿದ್ದರೂ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಕರಾವಳಿಯ ಸರ್ವಾಂಗೀಣ ಅಭಿವೃದ್ಧಿಗೆ ಈ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳುವಂತೆ ಎಸ್‌ಡಿಪಿಐ ಆಗ್ರಹಿಸಿದೆ.

ಎಸ್‌ಡಿಪಿಐ ಮುಂದಿಟ್ಟ ಪ್ರಮುಖ ಬೇಡಿಕೆಗಳು

  • ಕರಾವಳಿಯ ಸಮುದ್ರ ತೀರ ಹಾಗೂ ಪ್ರವಾಸಿ ತಾಣಗಳನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಅಭಿವೃದ್ಧಿಪಡಿಸಿ ಸಮಗ್ರ ಪ್ರವಾಸೋದ್ಯಮ ನೀತಿ ಜಾರಿಗೊಳಿಸಬೇಕು.
  • ಆಡಳಿತಾತ್ಮಕ ಅನುಕೂಲಕ್ಕಾಗಿ ಪುತ್ತೂರನ್ನು ಪ್ರತ್ಯೇಕ ಜಿಲ್ಲೆಯಾಗಿ ಘೋಷಿಸಬೇಕು.
  • ರಾಷ್ಟ್ರೀಯ ಹೆದ್ದಾರಿ ಹಾಗೂ ಗ್ರಾಮೀಣ ರಸ್ತೆಗಳ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ, ವೈಜ್ಞಾನಿಕ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಬೇಕು.
  • ಬ್ಯಾರಿ ಸಮುದಾಯದ ಬಹುಕಾಲದ ಬೇಡಿಕೆಯಾದ ‘ಬ್ಯಾರಿ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಬೇಕು.
  • ಬಂದರು ಅಭಿವೃದ್ಧಿ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಕೈಗಾರಿಕೆಗಳನ್ನು ಸ್ಥಾಪಿಸಬೇಕು.
  • ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಿ, ಮೀನುಗಾರರ ಬೇಡಿಕೆಗಳನ್ನು ಈಡೇರಿಸಬೇಕು.
  • ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 1.27 ಲಕ್ಷ 94ಸಿ ಹಾಗೂ ಅಕ್ರಮ-ಸಕ್ರಮ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ಅರ್ಹರಿಗೆ ಹಕ್ಕುಪತ್ರ ವಿತರಿಸಬೇಕು.
  • ಕೆಂಪು ಕಲ್ಲು ಹಾಗೂ ಮರಳು ನೀತಿಯಲ್ಲಿರುವ ಗೊಂದಲ ನಿವಾರಿಸಿ, ಸಂಪನ್ಮೂಲ ಆಧಾರಿತ ಉದ್ಯೋಗ ಸೃಷ್ಟಿಗೆ ಕ್ರಮ ಕೈಗೊಳ್ಳಬೇಕು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸುವ ಮೂಲಕ ಕರಾವಳಿಯ ಜನರ ಆಶೋತ್ತರಗಳಿಗೆ ಸ್ಪಂದಿಸಿ, ಈ ಭಾಗದ ಸಮಗ್ರ ಅಭಿವೃದ್ಧಿಗೆ ಅಗತ್ಯವಾದ ದಿಟ್ಟ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ ಎಂಬ ವಿಶ್ವಾಸ ಜಿಲ್ಲೆಯ ಜನರಲ್ಲಿ ಇದೆ ಎಂದು ಅನ್ವರ್ ಸಾದತ್ ಬಜತ್ತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

m

 

Related Posts