Featured, ಇತರೆ, ಸ್ಥಳೀಯ

ಎಸ್‌ಐಆರ್ ಕುರಿತು ಜನಜಾಗೃತಿ ಅಗತ್ಯ: ಮತದಾನ ಇಲ್ಲದಿದ್ದರೆ ಸವಲತ್ತು ಇಲ್ಲ – ಟಿ.ಎಂ. ಶಾಹಿದ್ ತೆಕ್ಕಿಲ್

ಅರಂತೋಡು, ಜೂ.19: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಜನಜಾಗೃತಿ ಮೂಡಿಸುವ ಅಗತ್ಯವಿದ್ದು, ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳುವಂತೆ ಬಿಎಲ್‌ಎ-2 ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ನೀಡಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಮಿಕ ಕನಿಷ್ಠ ವೇತನ ಸಲಹಾ ಸಮಿತಿ ರಾಜ್ಯ ಅಧ್ಯಕ್ಷ ಟಿ.ಎಂ. ಶಾಹಿದ್ ತೆಕ್ಕಿಲ್ ಕರೆ ನೀಡಿದರು.

ಅವರು ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಅವರ ನೇತೃತ್ವದಲ್ಲಿ ಆಯೋಜಿಸಿದ್ದ ಬಿಎಲ್‌ಎ-2 ಕಾರ್ಯಾಗಾರದಲ್ಲಿ ಮಾತನಾಡಿದರು.
ರಾಜ್ಯ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲಿ ಪಕ್ಷ ಸಂಘಟನೆಯೊಂದಿಗೆ ಎಸ್‌ಐಆರ್ ಕುರಿತು ರಾಜ್ಯಾದ್ಯಂತ ಜನಜಾಗೃತಿ ಅಭಿಯಾನ ನಡೆಯುತ್ತಿದ್ದು, ತಾವು ಸಹ ಉಸ್ತುವಾರಿಯಾಗಿ ಈ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದಾಗಿ ತಿಳಿಸಿದರು. ಬೂತ್ ಮಟ್ಟದಲ್ಲಿ ಹಾಗೂ ಮನೆ ಮನೆಗೆ ತೆರಳಿ ಮತದಾರರನ್ನು ಜಾಗೃತಗೊಳಿಸುವ ಜವಾಬ್ದಾರಿ ಪ್ರತಿಯೊಬ್ಬ ಕಾರ್ಯಕರ್ತರ ಮೇಲಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ವಿವಿಧ ಸೌಲಭ್ಯಗಳನ್ನು ಪಡೆಯಲು ಸಮಸ್ಯೆಯಾಗುವ ಸಾಧ್ಯತೆ ಇರುವುದರಿಂದ ಈ ಕುರಿತು ಜನರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್ ಮಾತನಾಡಿ, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಬಿಎಲ್‌ಎ-2 ಕಾರ್ಯಕರ್ತರು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.


ಕೆಪಿಸಿಸಿ ತರಬೇತುದಾರರಾದ ಶಶಿಧರ್ ಮಾಸ್ಟರ್ ಹಾಗೂ ಚೇತನ್ ಅವರು ಎಸ್‌ಐಆರ್ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ವಿವರವಾದ ಮಾಹಿತಿ ನೀಡಿದರು.
ಕರ್ನಾಟಕ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಮಾತನಾಡಿ, ಪ್ರತಿಯೊಬ್ಬ ನಾಗರಿಕರೂ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಜಾಗೃತರಾಗಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸೂಡಾ ಅಧ್ಯಕ್ಷ ಮುಸ್ತಫಾ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭವಾನಿ ಶಂಕರ್ ಸೇರಿದಂತೆ ಅರಂತೋಡು, ಸಂಪಾಜೆ, ತೊಡಿಕಾನ, ಮರ್ಕಂಜ ಹಾಗೂ ನೆಲ್ಲೂರು ಕೆಮ್ರಾಜೆ ಗ್ರಾಮಗಳ ಕಾಂಗ್ರೆಸ್ ಮುಖಂಡರು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಸಂಪಾಜೆ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಸ್.ಕೆ. ಹನೀಫ್ ಸ್ವಾಗತಿಸಿದರು. ಬ್ಲಾಕ್ ಕಾಂಗ್ರೆಸ್ ಮುಖಂಡ ಅಶ್ರಫ್ ಗುಂಡಿ ವಂದಿಸಿದರು. ಭವಾನಿ ಶಂಕರ್ ಕಾರ್ಯಕ್ರಮ ನಿರೂಪಿಸಿದರು.

m

Related Posts