Featured, ಇತರೆ, ಸ್ಥಳೀಯ

ಆಲೆಟ್ಟಿ–ಅರಂಬೂರು–ಮಾಂಬ್ಲಿ ರಸ್ತೆ ಕಾಂಕ್ರೀಟೀಕರಣಕ್ಕೆ ಆಗ್ರಹ: ಗ್ರಾಮೀಣಾಭಿವೃದ್ಧಿ ನಿರ್ದೇಶಕರಿಗೆ ಎಸ್‌ಡಿಪಿಐ ಮನವಿ

ಹದಗೆಟ್ಟ ರಸ್ತೆಯಿಂದ ಸಾರ್ವಜನಿಕರು, ಶಾಲಾ ಮಕ್ಕಳು ಸಂಕಷ್ಟ; ತುರ್ತು ದುರಸ್ತಿ ಕಾಮಗಾರಿಗೆ ಒತ್ತಾಯ

ಸುಳ್ಯ, ಜು. 8: ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಂಬೂರು–ಮಾಂಬ್ಲಿ ರಸ್ತೆಯನ್ನು ತುರ್ತಾಗಿ ದುರಸ್ತಿಪಡಿಸಿ ಕಾಂಕ್ರೀಟೀಕರಣಗೊಳಿಸುವಂತೆ ಆಗ್ರಹಿಸಿ ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಗ್ರಾಮೀಣಾಭಿವೃದ್ಧಿ ಇಲಾಖೆಯ ನಿರ್ದೇಶಕರಿಗೆ ಮನವಿ ಸಲ್ಲಿಸಲಾಗಿದೆ.

ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಂಬೂರು–ಮಾಂಬ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಈ ಮಾರ್ಗದಲ್ಲಿ ಸಂಚರಿಸುವ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ನಿತ್ಯ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಸುಮಾರು 40ಕ್ಕೂ ಹೆಚ್ಚು ಕುಟುಂಬಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿರುವ ಇದು ಮಳೆಗಾಲದಲ್ಲಿ ಕೆಸರುಮಯವಾಗಿ ವಾಹನ ಸಂಚಾರಕ್ಕೆ ಅಸಾಧ್ಯವಾಗುತ್ತದೆ. ಬೇಸಿಗೆ ಸಂದರ್ಭದಲ್ಲಿ ಧೂಳಿನ ಕಾಟ ಹೆಚ್ಚಾಗಿ ಸ್ಥಳೀಯ ನಿವಾಸಿಗಳ ಆರೋಗ್ಯದ ಮೇಲೂ ದುಷ್ಪರಿಣಾಮ ಉಂಟಾಗುತ್ತಿದೆ ಎಂದು ಗಮನ ಸೆಳೆಯಲಾಗಿದೆ.

ರಸ್ತೆಯಲ್ಲಿರುವ ದೊಡ್ಡ ದೊಡ್ಡ ಗುಂಡಿಗಳಿಂದ ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನ ಸವಾರರು ಪ್ರತಿನಿತ್ಯ ಅಪಘಾತದ ಭೀತಿಯಲ್ಲೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಸ್ಥಳೀಯರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ರಸ್ತೆ ದುರಸ್ತಿ ಹಾಗೂ ಕಾಂಕ್ರೀಟೀಕರಣ ಕಾಮಗಾರಿಯನ್ನು ತುರ್ತಾಗಿ ಕೈಗೊಳ್ಳುವ ಮೂಲಕ ಸಾರ್ವಜನಿಕರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಮೀರಝ್ ಸುಳ್ಯ ಮನವಿಯಲ್ಲಿ ಒತ್ತಾಯಿಸಿದ್ದಾರೆ.

m

Related Posts