Featured, ಇತರೆ, ಸ್ಥಳೀಯ

ಸುಳ್ಯ, ಜು. 11: ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯಡಿ ಸಾಮಾಜಿಕ ಪರಿಶೋಧನಾ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಸಂಪನ್ಮೂಲ ವ್ಯಕ್ತಿಗಳು (ವಿಆರ್‌ಪಿ) ತಮಗೆ ಕನಿಷ್ಠ ವೇತನ ನಿಗದಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ಅವರಿಗೆ ಅವರ ತೆಕ್ಕಿಲ್ ನಿವಾಸದಲ್ಲಿ ಮನವಿ ಸಲ್ಲಿಸಿದರು.

ಮನವಿಯಲ್ಲಿ, ಕಳೆದ ಹಲವು ವರ್ಷಗಳಿಂದ ಗ್ರಾಮೀಣ ಭಾಗದ ವಿವಿಧ ಅಭಿವೃದ್ಧಿ ಯೋಜನೆಗಳ ಸಾಮಾಜಿಕ ಪರಿಶೋಧನೆ ಮತ್ತು ಪಾರದರ್ಶಕ ಅನುಷ್ಠಾನಕ್ಕಾಗಿ ಸೇವೆ ಸಲ್ಲಿಸುತ್ತಿದ್ದರೂ, ಪ್ರಸ್ತುತ ತಮಗೆ ಕೇವಲ ₹8,000 ರಿಂದ ₹11,500ರವರೆಗೆ ಗೌರವಧನ ಮಾತ್ರ ನೀಡಲಾಗುತ್ತಿದೆ. ಈ ಮೊತ್ತದಿಂದ ಜೀವನ ನಿರ್ವಹಣೆ ದುಸ್ತರವಾಗಿರುವುದರಿಂದ, ತಮ್ಮನ್ನು ಅಕುಶಲ ಕಾರ್ಮಿಕರು ಎಂದು ಪರಿಗಣಿಸಿ ದಿನಕ್ಕೆ ₹743ರಂತೆ ತಿಂಗಳಿಗೆ ₹19,319 ಕನಿಷ್ಠ ವೇತನ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.
ಇದಲ್ಲದೆ, ಆರೋಗ್ಯ ವಿಮೆ ಹಾಗೂ ಪಿಂಚಣಿ ಸೇರಿದಂತೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಕಲ್ಪಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಯಿತು.
ಮನವಿ ಸ್ವೀಕರಿಸಿದ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ಮಾತನಾಡಿ, ಕನಿಷ್ಠ ವೇತನಕ್ಕೆ ಸಂಬಂಧಿಸಿದ ವಿಷಯವು ಪ್ರಸ್ತುತ ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ ಎಂದು ತಿಳಿಸಿದರು. ಈ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅವರೊಂದಿಗೆ ಚರ್ಚಿಸಿ, ಮುಂದಿನ ಕನಿಷ್ಠ ವೇತನ ಸಲಹಾ ಮಂಡಳಿಯ ಸಭೆಯಲ್ಲಿ ವಿಷಯವನ್ನು ಪ್ರಸ್ತಾಪಿಸಿ ಚರ್ಚಿಸುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ರಾಜೀವ್ ಸಾಲ್ಯಾನ್, ಸುಳ್ಯದ ಚಂದ್ರಶೇಖರ ಪಂಜ, ರೇಷ್ಮಾ, ಪ್ರತಿಭಾ, ಅಮೃತ ಹಾಗೂ ಬೆಳ್ತಂಗಡಿಯ ಲೀಲಾವತಿ, ಸುಮಲತ, ಅಮಿತಾ, ಸುಪ್ರೀತ, ಉಷಲತಾ, ಪ್ರಮೀಳಾ ಮತ್ತು ಲಾವಣ್ಯ ಉಪಸ್ಥಿತರಿದ್ದರು.
m

Related Posts