ಬೆಳ್ತಂಗಡಿ, ಆ. 4: ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ರೀತಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಆರೋಪಿಗೆ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ತೀರ್ಪು ನೀಡಿದೆ.
2015ರ ಜುಲೈ 23ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ನಿಷೇಧಕ್ಕೆ ಒಳಪಟ್ಟ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಬೆಳ್ತಂಗಡಿ ವಲಯದ ವತಿಯಿಂದ ಆಯೋಜಿಸಲಾದ ಪ್ರತಿಭಟನಾ ಸಭೆಯಲ್ಲಿ ಮಹಮ್ಮದ್ ರಿಯಾಜ್ ಫರಂಗಿಪೇಟೆ ಅವರು ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ರೀತಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದರೆಂದು ಆರೋಪಿಸಲಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 315/2015ರಂತೆ ಭಾರತೀಯ ದಂಡ ಸಂಹಿತೆಯ (IPC) ಕಲಂ 153(A) ಹಾಗೂ 295(A) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆಯನ್ನು ಅಂದಿನ ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾಗಿದ್ದ ಹಾಗೂ ತನಿಖಾಧಿಕಾರಿಯಾಗಿದ್ದ ರವಿ ಬಿ.ಎಸ್. ಅವರು ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಮಲಿಂಗಪ್ಪ ಅವರು ಭಾರತೀಯ ದಂಡ ಸಂಹಿತೆಯ ಕಲಂ 153(A) ಅಡಿಯಲ್ಲಿ ಆರೋಪಿಗೆ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ಆದೇಶಿಸಿದರು.
ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಆಶೀತ ಅವರು ವಾದ ಮಂಡಿಸಿದ್ದರು.




m

