ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜುಗಳಿಗೆ ಆ.8ರಂದು ರಜೆ
ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ತುರ್ತು ನೆರವಿಗಾಗಿ ಸಾರ್ವಜನಿಕರು ಟೋಲ್ ಫ್ರೀ ಸಂಖ್ಯೆ 1077 ಅಥವಾ 0824-2442590 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಮಂಗಳೂರು, ಆ.7: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಹವಾಮಾನ ಮುನ್ಸೂಚನೆಯಂತೆ ಪುತ್ತೂರು ಉಪವಿಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಆಗಸ್ಟ್ 8, 2026ರಂದು ಪುತ್ತೂರು ಉಪವಿಭಾಗದ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರ ಆದೇಶದಂತೆ ಪುತ್ತೂರು, ಸುಳ್ಯ, ಕಡಬ ಹಾಗೂ ಬೆಳ್ತಂಗಡಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐ ಮತ್ತು ಡಿಪ್ಲೊಮಾ ಕಾಲೇಜುಗಳು ಸೇರಿದಂತೆ 12ನೇ ತರಗತಿವರೆಗೆ (ಎಲ್ಲಾ ವಸತಿ ಶಾಲೆ-ಕಾಲೇಜುಗಳೂ ಸೇರಿ) ಶನಿವಾರ (ಆ.8) ರಜೆ ಘೋಷಿಸಲಾಗಿದೆ.
ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.
ಜಿಲ್ಲಾಡಳಿತವು ಸಾರ್ವಜನಿಕರಿಗೆ ಹಲವು ಮುನ್ನೆಚ್ಚರಿಕೆ ಸೂಚನೆಗಳನ್ನು ನೀಡಿದ್ದು, ಮಕ್ಕಳು ನದಿ, ಕೆರೆ, ತಗ್ಗು ಪ್ರದೇಶ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಪಾಲಕರು ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಹಾಗೂ ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ ಮತ್ತು ಸಮುದ್ರ ತೀರಗಳಿಗೆ ತೆರಳುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಸೂಚಿಸಲಾಗಿದೆ.





m


Scroll To Top