ಇತರೆ

ಪುತ್ತೂರು : ಸಾಮೆತ್ತಡ್ಕ ಶಾಲೆಯ ಶಿಕ್ಷಕಿ ಮರಿಯಾ ಅಶ್ರಫ್‌ಗೆ ದಕ್ಷಿಣ ಕನ್ನಡ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಪುತ್ತೂರು: ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ನಿರಂತರ, ಉತ್ತಮ ಹಾಗೂ ಶ್ಲಾಘನೀಯ ಸೇವೆಯನ್ನು ಗುರುತಿಸಿ ಪುತ್ತೂರು ತಾಲೂಕಿನ ಸಾಮೆತ್ತಡ್ಕ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ಮರಿಯಾ ಅಶ್ರಫ್ ಅವರು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ಶಿಕ್ಷಕ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ

ಮಂಗಳೂರಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶ್ರೀಮತಿ ಮರಿಯಾ ಅಶ್ರಫ್ ಅವರಿಗೆ ಅಧಿಕೃತವಾಗಿ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಗುವುದು

ಶೈಕ್ಷಣಿಕ ಹಿನ್ನೆಲೆ

ಮರಿಯಾ ಅಶ್ರಫ್ ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸುಳ್ಯ ತಾಲೂಕಿನ ಗೂನಡ್ಕದ ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೂರ್ಣಗೊಳಿಸಿದರು. ಬಳಿಕ ಪ್ರೌಢ ಹಾಗೂ ಪದವಿಪೂರ್ವ ಶಿಕ್ಷಣವನ್ನು ಆರಂತೋಡಿನ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಪಡೆದರು. ನಂತರ ಮಂಗಳೂರಿನ ಬಲ್ಮಠದಲ್ಲಿರುವ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಿ.ಎಡ್. ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು.

ಸಾರ್ಥಕ ವೃತ್ತಿ ಪಯಣ

ಶಿಕ್ಷಕಿಯಾಗಿ ವೃತ್ತಿ ಜೀವನ ಆರಂಭಿಸಿದ ಅವರು ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣದಲ್ಲಿ ಐದು ವರ್ಷಗಳ ಕಾಲ ಹಾಗೂ ಬಳಿಕ ಬೆಳ್ತಂಗಡಿ ತಾಲೂಕಿನ ತುರ್ಕಳಿಕೆಯಲ್ಲಿ ಐದು ವರ್ಷಗಳ ಕಾಲ ದಕ್ಷತೆ ಮತ್ತು ನಿಷ್ಠೆಯಿಂದ ಸೇವೆ ಸಲ್ಲಿಸಿದರು. 2019–20ನೇ ಸಾಲಿನಲ್ಲಿ ಪುತ್ತೂರು ತಾಲೂಕಿನ ಸಾಮೆತ್ತಡ್ಕ ಹಿರಿಯ ಪ್ರಾಥಮಿಕ ಶಾಲೆಗೆ ಕರ್ತವ್ಯಕ್ಕೆ ಹಾಜರಾದ ಅವರು, ಅಂದಿನಿಂದಲೂ ಕ್ರಿಯಾಶೀಲ ಹಾಗೂ ಪರಿಣಾಮಕಾರಿ ಬೋಧನೆಯ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿದ್ದಾರೆ.ಶಾಲಾ ಮಕ್ಕಳ ಶೈಕ್ಷಣಿಕ ಪ್ರಗತಿ, ಶಾಲೆಯ ಅಭಿವೃದ್ಧಿಗೆ ನೀಡಿದ ಕೊಡುಗೆ ಹಾಗೂ ಸಮರ್ಪಿತ ಸೇವೆಯನ್ನು ಪರಿಗಣಿಸಿ ಅವರಿಗೆ ಜಿಲ್ಲಾ ಮಟ್ಟದ ‘ಅತ್ಯುತ್ತಮ ಶಿಕ್ಷಕ ಪ್ರಶಸ್ತಿ’ ನೀಡಲಾಗುತ್ತಿದೆ.
ಮರಿಯಾ ಅಶ್ರಫ್ ಅವರ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಸಹೋದ್ಯೋಗಿ ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಪೋಷಕರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.