ಸುಳ್ಯ: ಸುಳ್ಯ ಅಂಚೆ ಕಚೇರಿಯಲ್ಲಿ ಆಧಾರ್ ಸೇವೆಯನ್ನು ಬೆಳಗ್ಗೆಯಿಂದ ಸಂಜೆವರೆಗೆ ವಿಸ್ತರಿಸುವಂತೆ ಸಲ್ಲಿಸಿದ್ದ ಮನವಿಗೆ ಅಂಚೆ ಇಲಾಖೆ ಸ್ಪಂದಿಸಿದ್ದು, ಇಂದಿನಿಂದ ಸಾರ್ವಜನಿಕರಿಗೆ ಬೆಳಗ್ಗೆಯಿಂದ ಸಂಜೆವರೆಗೆ ಆಧಾರ್ ಸೇವೆ ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ.ಸುಳ್ಯ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರಿಗೆ ಆಧಾರ್ ನೋಂದಣಿ, ತಿದ್ದುಪಡಿ, ಬಯೋಮೆಟ್ರಿಕ್ ಅಪ್‌ಡೇಟ್ ಸೇರಿದಂತೆ ವಿವಿಧ ಆಧಾರ್ ಸೇವೆಗಳ ಅಗತ್ಯ ಹೆಚ್ಚಾಗಿದ್ದು, ಇದರಿಂದ ಅಂಚೆ ಕಚೇರಿಯಲ್ಲಿ ಹೆಚ್ಚಿನ ಜನದಟ್ಟಣೆ ಉಂಟಾಗುತ್ತಿತ್ತು.
ರೇಷನ್ ಕಾರ್ಡ್ ಇ-ಕೆವೈಸಿ, ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ಅರ್ಜಿ ಹಾಗೂ ವಿವಿಧ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಆಧಾರ್ ಸೇವೆ ಅಗತ್ಯವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸಮಯಕ್ಕೆ ಸರಿಯಾಗಿ ಸೇವೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕೆಂಬ ಬೇಡಿಕೆ ವ್ಯಕ್ತವಾಗಿತ್ತು.
ಈ ಹಿನ್ನೆಲೆಯಲ್ಲಿ ಮಲೆನಾಡು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರು ಹಾಗೂ ಮಾಜಿ ನಗರ ಪಂಚಾಯತ್ ಸದಸ್ಯರಾದ ರಿಯಾಜ್ ಕಟ್ಟೆಕ್ಕಾರ್ ಅವರು ಸುಳ್ಯ ಅಂಚೆ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ಆಧಾರ್ ಸೇವೆಯ ಸಮಯವನ್ನು ಬೆಳಗ್ಗೆಯಿಂದ ಸಂಜೆವರೆಗೆ ವಿಸ್ತರಿಸುವಂತೆ ಕೋರಿದ್ದರು. ಮನವಿಗೆ ಸ್ಪಂದಿಸಿರುವ ಅಂಚೆ ಇಲಾಖೆ, ಇಂದಿನಿಂದ ಬೆಳಗ್ಗೆಯಿಂದ ಸಂಜೆವರೆಗೆ ಆಧಾರ್ ಸೇವೆ ಒದಗಿಸುವ ವ್ಯವಸ್ಥೆ ಮಾಡಿದೆ. ಇದರಿಂದ ಸುಳ್ಯ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮತ್ತು ಮಹಿಳೆಯರಿಗೆ ಹೆಚ್ಚಿನ ಅನುಕೂಲವಾಗಲಿದೆ.


