ರಸ್ತೆ ಸುರಕ್ಷತೆ, ಅಪರಾಧ ತಡೆ ಹಾಗೂ ಮಾದಕ ದ್ರವ್ಯಗಳ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ

ಸುಳ್ಯ: ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ 2026–27ನೇ ಸಾಲಿನ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆ. 26ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ (ರಿ.) ಸುಳ್ಯದ ಕಾರ್ಯದರ್ಶಿ ಹೇಮನಾಥ ಕೆ.ವಿ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿಯೇ ಸೇವಾ ಮನೋಭಾವ ಬೆಳೆಸಿಕೊಳ್ಳುವುದು ಅತ್ಯಂತ ಮಹತ್ವದ್ದಾಗಿದೆ. ಯುವ ರೆಡ್‌ಕ್ರಾಸ್ ಘಟಕದ ಚಟುವಟಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದೊಂದಿಗೆ ಸಮಾಜದ ಬಗ್ಗೆ ಕಾಳಜಿ ಬೆಳೆಸಲು ಸಹಕಾರಿಯಾಗಲಿ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ. ಮಾತನಾಡಿ, ಯುವ ರೆಡ್‌ಕ್ರಾಸ್ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸಾಮಾಜಿಕ ಜವಾಬ್ದಾರಿ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ವೇದಿಕೆಯಾಗಿದೆ. ವಿದ್ಯಾರ್ಥಿಗಳು ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಇತರರಿಗೆ ಮಾದರಿಯಾಗಬೇಕು ಎಂದರು.
ಸುಳ್ಯ ಪೊಲೀಸ್ ಠಾಣೆಯ ಉಪನಿರೀಕ್ಷಕ ಉದಯರವಿ ಎಂ.ವೈ. ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ‘ರಸ್ತೆ ಸುರಕ್ಷತೆ, ಅಪರಾಧ ತಡೆ ಹಾಗೂ ಮಾದಕ ದ್ರವ್ಯಗಳ ದುರ್ಬಳಕೆ’ ಕುರಿತು ಮಾಹಿತಿ ನೀಡಿದರು. ರಸ್ತೆ ಸುರಕ್ಷತೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಸಂಚಾರ ನಿಯಮಗಳನ್ನು ಪಾಲಿಸುವ ಮೂಲಕ ಅನೇಕ ಅಪಘಾತಗಳನ್ನು ತಪ್ಪಿಸಬಹುದು ಎಂದರು. ವಿದ್ಯಾರ್ಥಿಗಳು ಅಪರಾಧ ಚಟುವಟಿಕೆಗಳಿಂದ ದೂರವಿದ್ದು, ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿಕೊಂಡು ಸ್ನೇಹಿತರಲ್ಲಿಯೂ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು. ಯುವಜನರು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ಸಮಾಜದ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಹೇಳಿದರು.

ಗೌರವ ಅತಿಥಿ ಚಂದ್ರಶೇಖರ ಪೇರಾಲು ಮಾತನಾಡಿ, ರೆಡ್‌ಕ್ರಾಸ್ ಮೂಲಕ ದೊರೆಯುವ ಅವಕಾಶಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ಹಿರಿಯ ವಿದ್ಯಾರ್ಥಿಗಳು ಕಿರಿಯರಿಗೆ ಮಾದರಿಯಾಗಬೇಕು. ಯುವಕರು ದೇಶದ ಭವಿಷ್ಯವಾಗಿದ್ದು, ತಮ್ಮ ಜವಾಬ್ದಾರಿಗಳನ್ನು ಅರಿತು ಸಮಾಜದಲ್ಲಿ ಉತ್ತಮ ಬದಲಾವಣೆಗೆ ಕಾರಣರಾಗಬೇಕು ಎಂದರು. ಯುವ ರೆಡ್‌ಕ್ರಾಸ್ ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಪ್ರಾಸ್ತಾವಿಕವಾಗಿ ಮಾತನಾಡಿ, ಯುದ್ಧದಲ್ಲಿ ಗಾಯಗೊಂಡವರ ರಕ್ಷಣೆಗಾಗಿ ಆರಂಭಗೊಂಡ ರೆಡ್‌ಕ್ರಾಸ್ ಸಂಸ್ಥೆ ಬಳಿಕ ಮಾನವೀಯ ಸೇವೆಯ ಪ್ರಮುಖ ಸಂಸ್ಥೆಯಾಗಿ ಬೆಳೆದಿದೆ. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣಗಳ ಬೆಳವಣಿಗೆಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ಸುಳ್ಯ ಪೊಲೀಸ್ ಠಾಣೆಯ ಪ್ರೊಬೆಷನರಿ ಉಪನಿರೀಕ್ಷಕ ಕೃಷ್ಣ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಧರ್ ವಿ., ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಭಿನಂದನ್, ಯುವ ರೆಡ್‌ಕ್ರಾಸ್ ಘಟಕದ ನಾಯಕರಾದ ಸೃಜನ್, ಸಿಂಚನ ಸೇರಿದಂತೆ ಹಲವರು ಉಪಸ್ಥಿತರಿದ್ದರು. ರೆಡ್‌ಕ್ರಾಸ್ ಸದಸ್ಯರಾದ ಅನ್ಸೀಯ, ಸೌಪರ್ಣಿಕ, ಮೋನಿಷಾ, ನಯನಾ ಹಾಗೂ ಕೃತಿ ಪ್ರಾರ್ಥಿಸಿದರು. ನಿತೀಶ್ ಸ್ವಾಗತಿಸಿ, ಲಿಯಾ ತಸ್ನೀಮ್ ವಂದಿಸಿದರು. ನಮ್ರತಾ ಮತ್ತು ಮೋನಿಷಾ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳ ವತಿಯಿಂದ ವಿವಿಧ ಮನೋರಂಜನಾ ಆಟಗಳನ್ನು ಆಯೋಜಿಸಲಾಯಿತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.



