ಉಡುಪಿ, ಸೆ.30: ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.
ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ. ಪತ್ನಿಯೊಂದಿಗೆ ನಡೆದ ಜಗಳದ ಬಳಿಕ ಕೆಲವು ದಿನಗಳ ಹಿಂದೆ ವಿಷ ಸೇವಿಸಿದ್ದ ರಾಜೇಶ್ ಅವರನ್ನು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದ ಬಳಿಕ ಅವರು ಚೇತರಿಸಿಕೊಂಡಿದ್ದು, ಡಿಸ್ಚಾರ್ಜ್‌ಗೆ ಸಿದ್ಧತೆ ನಡೆಸಲಾಗುತ್ತಿತ್ತು ಎನ್ನಲಾಗಿದೆ.
ಬುಧವಾರ ಆಸ್ಪತ್ರೆ ಸಿಬ್ಬಂದಿಯೊಂದಿಗೆ ವಾಕಿಂಗ್‌ಗೆ ತೆರಳುವುದಾಗಿ ಹೇಳಿ ಕೊಠಡಿಯಿಂದ ಹೊರಬಂದ ರಾಜೇಶ್, ಬಳಿಕ ಕಿಟಕಿಯ ಬಳಿ ತೆರಳಿ ಗ್ರಿಲ್ ಮೂಲಕ ಕೆಳಗೆ ಇಳಿಯಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಸುರಕ್ಷತೆಗಾಗಿ ಅಳವಡಿಸಲಾಗಿದ್ದ ಜಾಲರಿಯನ್ನು ಹರಿದು ಕೆಳಗೆ ಇಳಿಯುತ್ತಿದ್ದಾಗ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ. ಬಿದ್ದ ಪರಿಣಾಮ ರಾಜೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಆಸ್ಪತ್ರೆ ಸಿಬ್ಬಂದಿ ಅವರನ್ನು ರಕ್ಷಿಸಿ ತುರ್ತು ಚಿಕಿತ್ಸಾ ವಿಭಾಗಕ್ಕೆ ದಾಖಲಿಸಿದ್ದಾರೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದ್ದು, ಕೆಎಂಸಿ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಚಿಕಿತ್ಸೆ ಮುಂದುವರಿಸಿದೆ.


