ಇತರೆ

ಎಸ್‌ಐಆರ್ ಹೆಸರಿನಲ್ಲಿ ಅರ್ಜಿ ನಮೂನೆ-7 ದುರ್ಬಳಕೆ ಆರೋಪ: ಕ್ರಮಕ್ಕೆ ಸಿಎಂ ಶಿವಕುಮಾರ್ ಪಟ್ಟು

ಕ್ರಮ ಕೈಗೊಳ್ಳುವವರೆಗೆ ಕಚೇರಿಯಿಂದ ತೆರಳುವುದಿಲ್ಲ : ಡಿಕೆಶಿ 

ಬೆಂಗಳೂರು: ಎಸ್‌ಐಆರ್‌ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯ ಹೆಸರಿನಲ್ಲಿ ದಲಿತ, ಅಲೆಮಾರಿ ಹಾಗೂ ಮುಸ್ಲಿಂ ಸಮುದಾಯದ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಬಿಜೆಪಿ ಕಾರ್ಯಕರ್ತರು ಅಕ್ರಮವಾಗಿ ಅರ್ಜಿ ನಮೂನೆ-7 ಸಲ್ಲಿಸುತ್ತಿದ್ದಾರೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಈ ಕುರಿತು ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಒತ್ತಾಯಿಸಿದ್ದಾರೆ. ಈ ಸಂಬಂಧ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್‌ ಅವರಿಗೆ ದೂರು ಸಲ್ಲಿಸಿರುವ ಶಿವಕುಮಾರ್‌, ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಕ್ರಮ ಕೈಗೊಳ್ಳುವವರೆಗೆ ಕಚೇರಿಯಿಂದ ತೆರಳುವುದಿಲ್ಲ ಎಂದು ಹೇಳಿ ಅವರು ಅಲ್ಲಿಯೇ ಕುಳಿತಿದ್ದಾರೆ.

ಗೃಹ ಸಚಿವ ಪ್ರಿಯಾಂಕ್‌ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಕಾಂಗ್ರೆಸ್‌ನ ಹಲವು ನಾಯಕರು ಮುಖ್ಯ ಚುನಾವಣಾಧಿಕಾರಿ ಕಚೇರಿಯಲ್ಲಿ ಉಪಸ್ಥಿತರಿದ್ದು, ಕ್ರಮಕ್ಕೆ ಒತ್ತಾಯಿಸಿದ್ದಾರೆ. ತಮ್ಮ ದೂರಿನಲ್ಲಿ, ಅರ್ಜಿ ನಮೂನೆ-7ರಲ್ಲಿ ಮತದಾರರ ವಿವರಗಳನ್ನು ಪೂರ್ವ ಮುದ್ರಣ ಮಾಡಲಾಗಿದೆ. ಮತದಾರರ ಇಷ್ಟೊಂದು ಪ್ರಮಾಣದ ವೈಯಕ್ತಿಕ ದತ್ತಾಂಶ ಬಿಜೆಪಿ ಕಾರ್ಯಕರ್ತರಿಗೆ ಹೇಗೆ ಲಭ್ಯವಾಯಿತು ಎಂಬುದರ ಕುರಿತು ತನಿಖೆ ನಡೆಸಬೇಕು ಎಂದು ಶಿವಕುಮಾರ್‌ ಪ್ರಶ್ನಿಸಿದ್ದಾರೆ.
ಎಸ್‌ಐಆರ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯದ ವಿವಿಧೆಡೆ ಸಾರ್ವಜನಿಕರು ಪೊಲೀಸರಿಗೆ ದೂರು ನೀಡಿದ್ದರೂ, ಸಂಬಂಧಪಟ್ಟ ಸಿಬ್ಬಂದಿ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ. ಅರ್ಜಿಗಳನ್ನು ಸಲ್ಲಿಸಲು ಹಣಕಾಸಿನ ನೆರವು ನೀಡುತ್ತಿರುವವರು ಯಾರು ಎಂಬುದನ್ನೂ ಪತ್ತೆಹಚ್ಚಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ. ದೂರನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಎರಡು–ಮೂರು ದಿನಗಳ ಕಾಲಾವಕಾಶ ನೀಡುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಆದರೆ, ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಶಿವಕುಮಾರ್‌ ಒತ್ತಾಯಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.