ಗ್ರಾಮೀಣ ರಸ್ತೆ ಅಭಿವೃದ್ಧಿಗೆ ₹6.5 ಕೋಟಿ ವಿಶೇಷ ಅನುದಾನ ಬಿಡುಗಡೆಗೆ ಮನವಿ
ಬೆಂಗಳೂರು: ಸುಳ್ಯ ತಾಲೂಕಿನ ಅಜ್ಜಾವರ, ಅರಂತೋಡು, ಆಲೆಟ್ಟಿ, ತೊಡಿಕಾನ ಹಾಗೂ ಸಂಪಾಜೆ ಗ್ರಾಮಗಳ ಗ್ರಾಮೀಣ ರಸ್ತೆಗಳ ಸಮಗ್ರ ಅಭಿವೃದ್ಧಿಗಾಗಿ ₹6.5 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ (ಸಚಿವ ದರ್ಜೆ) ಟಿ.ಎಂ. ಶಾಹಿದ್ ತೆಕ್ಕಿಲ್ ಅವರು ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಸುಳ್ಯ ತಾಲೂಕಿನ ಈ ಗ್ರಾಮಗಳು ಪ್ರಮುಖ ಗ್ರಾಮೀಣ ಪ್ರದೇಶಗಳಾಗಿದ್ದು, ಸರ್ವಧರ್ಮೀಯರು, ಹಿಂದುಳಿದ ವರ್ಗಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದಾರೆ. ಅಲ್ಲದೆ, ಈ ಭಾಗಗಳಲ್ಲಿ ಪ್ರಸಿದ್ಧ ದೇವಸ್ಥಾನಗಳು, ಮಸೀದಿಗಳು ಸೇರಿದಂತೆ ಹಲವು ಧಾರ್ಮಿಕ ಕ್ಷೇತ್ರಗಳಿದ್ದು, ನಿತ್ಯ ನೂರಾರು ಭಕ್ತರು ಹಾಗೂ ಸಾರ್ವಜನಿಕರು ಸಂಚರಿಸುತ್ತಿದ್ದಾರೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.
ಪ್ರಸ್ತುತ ಈ ಭಾಗಗಳ ಹಲವು ಗ್ರಾಮೀಣ ರಸ್ತೆಗಳು ತೀವ್ರ ಹದಗೆಟ್ಟಿದ್ದು, ಸಾರ್ವಜನಿಕರು, ಶಾಲಾ ಮಕ್ಕಳು ಹಾಗೂ ವಾಹನ ಸವಾರರ ದಿನನಿತ್ಯದ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಅಂತರ್ರಾಜ್ಯ ಹಾಗೂ ಅಂತರ್ಜಿಲ್ಲಾ ಗಡಿ ಪ್ರದೇಶಗಳನ್ನು ಸಂಪರ್ಕಿಸುವ ರಸ್ತೆಗಳೂ ಇದರಲ್ಲಿ ಸೇರಿರುವುದರಿಂದ, ಅವುಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕಾದ ಅಗತ್ಯವಿದೆ ಎಂದು ಟಿ.ಎಂ. ಶಾಹಿದ್ ಅವರು ಸಚಿವರ ಗಮನಕ್ಕೆ ತಂದರು.
ಜನಸಾಮಾನ್ಯರ ಹಿತದೃಷ್ಟಿಯಿಂದ ಈ ಭಾಗಗಳ ಹದಗೆಟ್ಟ ರಸ್ತೆಗಳ ದುರಸ್ತಿ ಹಾಗೂ ಸಮಗ್ರ ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಲು ಅಗತ್ಯವಿರುವ ₹6.5 ಕೋಟಿ ವಿಶೇಷ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್ ಉಪಸ್ಥಿತರಿದ್ದರು.
ಮನವಿಯನ್ನು ಸ್ವೀಕರಿಸಿದ ಸಚಿವ ಈಶ್ವರ ಖಂಡ್ರೆ ಅವರು, ಬೇಡಿಕೆಗಳ ಕುರಿತು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.



