ಬದಿಯಡುಕ: ನೆಕ್ರಾಜೆ ಪ್ರದೇಶದಲ್ಲಿ ಪ್ಲಸ್ ಟು ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳವಾರ (ಅ.13) ಸಂಜೆ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ವೋರ್ಕುಡ್ಲು ಕಣಿಯನ್ಮೂಲೆಯ ಜಯರಾಮನ್ ಹಾಗೂ ಬಿಂದು ದಂಪತಿಯ ಪುತ್ರಿ ಧನುಷಾ (17) ಎಂದು ಗುರುತಿಸಲಾಗಿದೆ.
ಮಂಗಳವಾರ ಸಂಜೆ ಸುಮಾರು 7 ಗಂಟೆಯ ವೇಳೆಗೆ ಧನುಷಾ ಮಲಗುವ ಕೋಣೆಯಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕುಟುಂಬಸ್ಥರು ತಕ್ಷಣ ಆಕೆಯನ್ನು ಚೆರ್ಕಳದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆಕೆಯನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ಪಡೆದ ಬದಿಯಡುಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಸಂಬಂಧಿ ಎಂ. ರತೀಶ್ ನೀಡಿದ ದೂರಿನ ಆಧಾರದಲ್ಲಿ ಬದಿಯಡುಕ ಪೊಲೀಸರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 194ರಡಿ ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಕರಣದ ತನಿಖೆಯನ್ನು ಸಬ್ ಇನ್ಸ್‌ಪೆಕ್ಟರ್ ಟಿ. ಸುನಿಲ್ ಕುಮಾರ್ ವಹಿಸಿಕೊಂಡಿದ್ದು, ಸಾವಿಗೆ ಕಾರಣ ಹಾಗೂ ಘಟನೆಗೆ ಸಂಬಂಧಿಸಿದ ಇತರ ಸಂದರ್ಭಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
