ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವತಯಾರಿ, ತಳಮಟ್ಟದಿಂದ ಪಕ್ಷದ ನಾಯಕತ್ವವನ್ನು ಬಲಪಡಿಸುವುದು ಹಾಗೂ ಸುಳ್ಯದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಮತ್ತಷ್ಟು ಸದೃಢಗೊಳಿಸುವ ಕುರಿತು ವಿಶೇಷ ಸಭೆ ಮತ್ತು ಸಂವಾದ ಕಾರ್ಯಕ್ರಮ ಅಕ್ಟೋಬರ್ 18ರಂದು ನಡೆಯಲಿದೆ.
ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ಪೂರ್ವಾಹ್ನ 10.30ಕ್ಕೆ ಕಾರ್ಯಕ್ರಮ ನಡೆಯಲಿದ್ದು, ವಿಧಾನ ಪರಿಷತ್ ಸದಸ್ಯ ಹಾಗೂ ಆಂಧ್ರಪ್ರದೇಶದ ಎಐಸಿಸಿ ಉಸ್ತುವಾರಿ ಪಿ.ವಿ. ಮೋಹನ್ ಅವರು ಭಾಗವಹಿಸಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ.
ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಸಂಘಟನಾತ್ಮಕವಾಗಿ ಸಜ್ಜುಗೊಳಿಸುವುದು, ಗ್ರಾಮ ಹಾಗೂ ಬೂತ್ ಮಟ್ಟದಲ್ಲಿ ನಾಯಕತ್ವವನ್ನು ಬಲಪಡಿಸುವುದು, ಕಾರ್ಯಕರ್ತರನ್ನು ಸಕ್ರಿಯಗೊಳಿಸುವುದು ಮತ್ತು ಸುಳ್ಯ ಕ್ಷೇತ್ರದಲ್ಲಿ ಪಕ್ಷದ ಸಂಘಟನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ರೂಪಿಸುವ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.
ಸಭೆಯಲ್ಲಿ ಪಕ್ಷದ ಪದಾಧಿಕಾರಿಗಳು, ಮಾಜಿ ಚುನಾಯಿತ ಪ್ರತಿನಿಧಿಗಳು, ಹಿರಿಯ ನಾಯಕರು, ಕಾರ್ಯಕರ್ತರು, ನಾಮನಿರ್ದೇಶಿತ ಸದಸ್ಯರು, ಮುಂಚೂಣಿ ಘಟಕಗಳ ಪದಾಧಿಕಾರಿಗಳು, ಗ್ರಾಮ ಸಮಿತಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸುವಂತೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಮನವಿ ಮಾಡಿದೆ.