Featured, ಸ್ಥಳೀಯ

ರಾಜ್ಯಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿ ಪುರಸ್ಕೃತ ಇಬ್ರಾಹಿಂ ಸಂಪ್ಯ ಅವರಿಗೆ ಟಿ.ಎಂ. ಶಹೀದ್ ತೆಕ್ಕಿಲ್ ಅವರಿಂದ ಸನ್ಮಾನ

ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಇಬ್ರಾಹಿಂ ಅವರಂತಹ ಆದರ್ಶ ಉಪನ್ಯಾಸಕರು ಇಂದಿನ ಸಮಾಜಕ್ಕೆ ಅಗತ್ಯ: ಟಿ.ಎಂ. ಶಹೀದ್ ತೆಕ್ಕಿಲ್

ಸುಳ್ಯ: ಶಾಲಾ ಶಿಕ್ಷಣ ಇಲಾಖೆಯ 2026ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ಭಾಜನರಾದ ಉಪ್ಪಿನಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಹಾಗೂ ಜಿಲ್ಲಾ ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ, ಸಂಪ್ಯ ನಿವಾಸಿ ಇಬ್ರಾಹಿಂ ಬಿ. ಅವರನ್ನು ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ಅವರು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಟಿ.ಎಂ. ಶಹೀದ್ ತೆಕ್ಕಿಲ್ ಅವರು, ಶಿಕ್ಷಣವೆಂದರೆ ಕೇವಲ ಪಠ್ಯಪುಸ್ತಕಗಳ ಜ್ಞಾನವನ್ನು ಬೋಧಿಸುವುದಲ್ಲ. ವಿದ್ಯಾರ್ಥಿಗಳಲ್ಲಿ ಶಿಸ್ತು, ಮಾನವೀಯ ಮೌಲ್ಯಗಳು, ಸೌಹಾರ್ದತೆ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿ, ಅವರ ಉಜ್ವಲ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವುದೇ ನಿಜವಾದ ಶಿಕ್ಷಣದ ಉದ್ದೇಶವಾಗಿದೆ. ಇಂತಹ ಮಹತ್ವದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವ ಇಬ್ರಾಹಿಂ ಅವರಂತಹ ಆದರ್ಶ ಉಪನ್ಯಾಸಕರು ಇಂದಿನ ಸಮಾಜಕ್ಕೆ ಅತ್ಯಂತ ಅಗತ್ಯವಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಶಿಸ್ತುಬದ್ಧ ವ್ಯಕ್ತಿತ್ವ, ಸಂಘಟನಾ ಚಾತುರ್ಯ ಹಾಗೂ ಸೌಹಾರ್ದತೆ ಮತ್ತು ಸಮನ್ವಯತೆಗೆ ಹೆಚ್ಚಿನ ಆದ್ಯತೆ ನೀಡುವ ಇಬ್ರಾಹಿಂ ಅವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟಿನಿಂದ ಮುನ್ನಡೆಸುವ ಕಾರ್ಯಶೈಲಿಯನ್ನು ರೂಢಿಸಿಕೊಂಡಿದ್ದಾರೆ. ಶೈಕ್ಷಣಿಕ ಸೇವೆಯೊಂದಿಗೆ ಸಂಘಟನಾತ್ಮಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅವರ ಕಾರ್ಯವೈಖರಿ ಅಭಿನಂದನೀಯವಾಗಿದೆ. ರಾಜ್ಯಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಯು ಅವರ ಶೈಕ್ಷಣಿಕ ಸೇವೆಗೆ ಸಂದ ಗೌರವವಾಗಿದೆ ಎಂದು ಶಹೀದ್ ತೆಕ್ಕಿಲ್ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ (ಸೂಡಾ) ಅಧ್ಯಕ್ಷ ಕೆ.ಎಂ. ಮುಸ್ತಫ, ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ಅಧ್ಯಕ್ಷ ಕೆ.ಬಿ. ಇಬ್ರಾಹಿಂ, ಜಮೀಯ್ಯತುಲ್ ಫಲಾಹ್ ಸುಳ್ಯ ತಾಲೂಕು ಘಟಕದ ಅಧ್ಯಕ್ಷ ನ್ಯಾಯವಾದಿ ಮೂಸಾ ಪೈಂಬಚ್ಚಾಲ್ ಮೊದಲಾದವರು ಉಪಸ್ಥಿತರಿದ್ದರು.