ನವದೆಹಲಿ: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಕುರಿತು ಗಂಭೀರ ಕಳವಳ ವ್ಯಕ್ತಪಡಿಸಿರುವ ‘ಪೀಪಲ್ ಅಗೇನ್ಸ್ಟ್ ಎಸ್ಐಆರ್’ (People Against SIR) ಸಂಘಟನೆಯು ಅಕ್ಟೋಬರ್ 23ರ ಶುಕ್ರವಾರ ದೇಶಾದ್ಯಂತ ‘ಪ್ರಜಾಪ್ರಭುತ್ವ ರಕ್ಷಣೆಗಾಗಿ ಜನತಾ ಮೆರವಣಿಗೆ’ (People’s March to Restore Democracy) ಹಾಗೂ ಜಂತರ್ ಮಂತರ್ ಮಾದರಿಯ ಪ್ರತಿಭಟನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕರೆ ನೀಡಿದೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆ, ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮತದಾರರ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಷ್ಟ್ರವ್ಯಾಪಿ ಜನಾಂದೋಲನ ರೂಪಿಸಲು ಸಂಘಟನೆ ಮುಂದಾಗಿದೆ.

ದೇಶದ ಚುನಾವಣಾ ವ್ಯವಸ್ಥೆ ಗಂಭೀರ ಸವಾಲುಗಳನ್ನು ಎದುರಿಸುತ್ತಿದ್ದು, ಮತದಾರರ ಪಟ್ಟಿಯಲ್ಲಿ ಅಕ್ರಮ ಬದಲಾವಣೆಗಳು ನಡೆದಿವೆ ಎಂದು ಸಂಘಟನೆ ಆರೋಪಿಸಿದೆ. ಚುನಾವಣಾ ಆಯೋಗದ ಸ್ವಾಯತ್ತತೆ ಹಾಗೂ ನಿಷ್ಪಕ್ಷಪಾತ ಕಾರ್ಯನಿರ್ವಹಣೆ ಕುರಿತು ಪ್ರಶ್ನೆಗಳನ್ನು ಎತ್ತಿರುವ ಸಂಘಟನೆಯು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜಕೀಯ ಹಿತಾಸಕ್ತಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಚುನಾವಣಾ ಆಯೋಗ ಕಾರ್ಯನಿರ್ವಹಿಸುತ್ತಿದೆ ಎಂದು ತನ್ನ ಪ್ರಕಟಣೆಯಲ್ಲಿ ಆರೋಪಿಸಿದೆ.
ಈ ಹಿನ್ನೆಲೆಯಲ್ಲಿ ಅಕ್ಟೋಬರ್ 14ರಂದು ವಿದ್ಯಾರ್ಥಿ, ಯುವಜನ, ರೈತ, ಕಾರ್ಮಿಕ, ಮಹಿಳಾ, ದಲಿತ, ಆದಿವಾಸಿ, ಅಲ್ಪಸಂಖ್ಯಾತ, ಅಂಗವಿಕಲ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯಗಳ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಸಭೆ ನಡೆಸಿ, ‘ಪೀಪಲ್ ಅಗೇನ್ಸ್ಟ್ ಎಸ್ಐಆರ್’ ಹೆಸರಿನಲ್ಲಿ ರಾಷ್ಟ್ರಮಟ್ಟದ ಒಕ್ಕೂಟವನ್ನು ರಚಿಸಿದ್ದಾರೆ.
ಸಭೆಯಲ್ಲಿ ದೇಶದ ಪ್ರಜಾಪ್ರಭುತ್ವ ಮೌಲ್ಯಗಳು, ಸಂವಿಧಾನಬದ್ಧ ಹಕ್ಕುಗಳು ಹಾಗೂ ಸ್ವತಂತ್ರ ಮತ್ತು ನ್ಯಾಯಸಮ್ಮತ ಚುನಾವಣಾ ವ್ಯವಸ್ಥೆಯ ರಕ್ಷಣೆಗಾಗಿ ಅಕ್ಟೋಬರ್ 23ರಂದು ದೇಶಾದ್ಯಂತ ಜನತಾ ಮೆರವಣಿಗೆ ಮತ್ತು ಪ್ರತಿಭಟನೆಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ.
‘ಪ್ರತಿ ಕೈಯಲ್ಲೂ ತ್ರಿವರ್ಣ ಧ್ವಜ, ಪ್ರತಿ ಬೀದಿಯಲ್ಲೂ ಜಂತರ್ ಮಂತರ್’
‘ಹರ್ ಹಾಥ್ ಮೇ ತಿರಂಗಾ, ಹರ್ ಗಲಿ ಮೇ ಜಂತರ್ ಮಂತರ್’ (ಪ್ರತಿ ಕೈಯಲ್ಲೂ ತ್ರಿವರ್ಣ ಧ್ವಜ, ಪ್ರತಿ ಬೀದಿಯಲ್ಲೂ ಜಂತರ್ ಮಂತರ್) ಎಂಬ ಘೋಷವಾಕ್ಯದೊಂದಿಗೆ ಪ್ರತಿಭಟನಾ ಕಾರ್ಯಕ್ರಮಗಳನ್ನು ನಡೆಸಲು ಸಂಘಟನೆ ಕರೆ ನೀಡಿದೆ.
ದೇಶದ ವಿವಿಧ ರಾಜ್ಯಗಳು, ಜಿಲ್ಲೆಗಳು, ತಾಲೂಕುಗಳು ಹಾಗೂ ಸ್ಥಳೀಯ ಪ್ರದೇಶಗಳಲ್ಲಿ ಜನತಾ ಮೆರವಣಿಗೆಗಳನ್ನು ಆಯೋಜಿಸುವ ಮೂಲಕ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆಯ ಕುರಿತು ಸಾರ್ವಜನಿಕ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಸಂಘಟನೆಯ ಪ್ರಕಟಣೆ ತಿಳಿಸಿದೆ.
ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಪ್ರಜಾಪ್ರಭುತ್ವದ ರಕ್ಷಣೆಗೆ ನಡೆಯುವ ಚಳವಳಿಯಲ್ಲಿ ಯುವಜನತೆಗೆ ಹೆಚ್ಚಿನ ಅವಕಾಶ ಹಾಗೂ ನಾಯಕತ್ವ ನೀಡಬೇಕು ಎಂದು ಸಂಘಟನೆ ಅಭಿಪ್ರಾಯಪಟ್ಟಿದೆ.
ಚುನಾವಣಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆಗೆ ಆಗ್ರಹ
ರಾಷ್ಟ್ರವ್ಯಾಪಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸಂಘಟನೆಯು ಹಲವು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆರವುಗೊಳಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು. ಮತದಾರರ ಪಟ್ಟಿಯಿಂದ ತೆಗೆದುಹಾಕಲಾದ ಅರ್ಹ ಮತದಾರರ ಹೆಸರುಗಳನ್ನು ಮರುಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಲಾಗಿದೆ.
ಅಲ್ಲದೆ, 2023ರ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರಿಗೆ ಸಂಬಂಧಿಸಿದ ಕಾಯ್ದೆಯ ವಿವಾದಾತ್ಮಕ ನಿಬಂಧನೆಗಳನ್ನು ರದ್ದುಗೊಳಿಸಬೇಕು. ಚುನಾವಣಾ ಆಯೋಗದ ಸದಸ್ಯರ ನೇಮಕಾತಿಗೆ ಪಾರದರ್ಶಕ ಹಾಗೂ ನಿಷ್ಪಕ್ಷಪಾತ ವ್ಯವಸ್ಥೆ ಜಾರಿಗೊಳಿಸಬೇಕು. ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕು ಎಂಬ ಬೇಡಿಕೆಗಳನ್ನು ಮುಂದಿಡಲಾಗಿದೆ.
ವಿದ್ಯುನ್ಮಾನ ಮತಯಂತ್ರಗಳ ಬದಲಾಗಿ ಕಾಗದದ ಮತಪತ್ರಗಳ ಮೂಲಕ ಮತದಾನ ನಡೆಸುವ ವ್ಯವಸ್ಥೆಯನ್ನು ಮರುಜಾರಿಗೊಳಿಸುವುದು ಹಾಗೂ ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣೆಗಳನ್ನು ಖಚಿತಪಡಿಸಲು ಸಮಗ್ರ ಚುನಾವಣಾ ಸುಧಾರಣೆಗಳನ್ನು ಕೈಗೊಳ್ಳಬೇಕು ಎಂದೂ ಸಂಘಟನೆ ಆಗ್ರಹಿಸಿದೆ.
ಇಂಡಿಯಾ ಮೈತ್ರಿಕೂಟದ ರಾಜಕೀಯ ಪಕ್ಷಗಳಿಗೂ ಆಹ್ವಾನ
ಅಕ್ಟೋಬರ್ 23ರಂದು ನಡೆಯಲಿರುವ ರಾಷ್ಟ್ರವ್ಯಾಪಿ ಜನತಾ ಮೆರವಣಿಗೆ ಹಾಗೂ ಪ್ರತಿಭಟನೆಗಳಿಗೆ ವಿರೋಧ ಪಕ್ಷಗಳ ‘ಇಂಡಿಯಾ’ (INDIA) ಮೈತ್ರಿಕೂಟದ ರಾಜಕೀಯ ಪಕ್ಷಗಳು ಬೆಂಬಲ ನೀಡಬೇಕು ಹಾಗೂ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದು ಸಂಘಟನೆ ಮನವಿ ಮಾಡಿದೆ.
ಪ್ರಜಾಪ್ರಭುತ್ವ ವ್ಯವಸ್ಥೆಯ ರಕ್ಷಣೆ, ಸಂವಿಧಾನಬದ್ಧ ಹಕ್ಕುಗಳ ಉಳಿವು ಹಾಗೂ ಚುನಾವಣಾ ಪ್ರಕ್ರಿಯೆಯ ವಿಶ್ವಾಸಾರ್ಹತೆಯನ್ನು ಕಾಪಾಡುವುದು ತಮ್ಮ ಹೋರಾಟದ ಪ್ರಮುಖ ಉದ್ದೇಶವಾಗಿದೆ ಎಂದು ಸಂಘಟನೆಯ ಪ್ರತಿನಿಧಿಗಳು ತಿಳಿಸಿದ್ದಾರೆ.
ದೇಶದ ಜನತೆಯೇ ಪ್ರಜಾಪ್ರಭುತ್ವದ ನಿಜವಾದ ಶಕ್ತಿಯಾಗಿದ್ದು, ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುವ ಉದ್ದೇಶದಿಂದ ರಾಷ್ಟ್ರವ್ಯಾಪಿ ಜನಾಂದೋಲನ ರೂಪಿಸಲಾಗುತ್ತಿದೆ ಎಂದು ‘ಪೀಪಲ್ ಅಗೇನ್ಸ್ಟ್ ಎಸ್ಐಆರ್’ ಸಂಘಟನೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.