ಸುಳ್ಯ: ಕಲ್ಮಡ್ಕದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟ ಭರತ್ ಹಾಗೂ ರಮೇಶ್ ಅವರ ಕುಟುಂಬಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸೂಕ್ತ ಆರ್ಥಿಕ ನೆರವು ಮಂಜೂರು ಮಾಡುವಂತೆ ಕೋರಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ವಿದ್ಯುತ್ ಸ್ಪರ್ಶದಿಂದ ಇಬ್ಬರು ಅಕಾಲಿಕವಾಗಿ ಮೃತಪಟ್ಟಿರುವುದು ಅವರ ಕುಟುಂಬಗಳನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ. ಕುಟುಂಬದ ಸದಸ್ಯರನ್ನು ಕಳೆದುಕೊಂಡಿರುವ ಸಂತ್ರಸ್ತ ಕುಟುಂಬಗಳು ಆರ್ಥಿಕ ಹಾಗೂ ಮಾನಸಿಕವಾಗಿ ಸಂಕಷ್ಟ ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಸರ್ಕಾರವು ಮಾನವೀಯ ನೆಲೆಯಲ್ಲಿ ಅವರ ನೆರವಿಗೆ ಧಾವಿಸಬೇಕೆಂದು ಶಾಸಕರು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ದುರಂತದಿಂದ ನೊಂದಿರುವ ಮೃತರ ಕುಟುಂಬಗಳ ಪ್ರಸ್ತುತ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಅವರಿಗೆ ಆರ್ಥಿಕ ಆಸರೆ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸೂಕ್ತ ಪರಿಹಾರ ಮೊತ್ತವನ್ನು ಮಂಜೂರು ಮಾಡಬೇಕು. ಆ ಮೂಲಕ ಸಂತ್ರಸ್ತ ಕುಟುಂಬಗಳ ಸಂಕಷ್ಟವನ್ನು ನಿವಾರಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಶಾಸಕಿ ಭಾಗೀರಥಿ ಮುರುಳ್ಯ ಅವರು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಕೋರಿದ್ದಾರೆ.