Featured, ಇತರೆ

ವಿರಾಜಪೇಟೆ ಎಸ್‌ಐಆರ್‌ | ಮತದಾರರ ಹೆಸರು ಅಕ್ರಮವಾಗಿ ಕೈಬಿಟ್ಟಿದ್ದರೆ ದಾಖಲೆ ಬಿಡುಗಡೆ ಮಾಡಿ: ಕಾಂಗ್ರೆಸ್‌ಗೆ ರಾಕೇಶ್ ದೇವಯ್ಯ ಸವಾಲು

ಎಸ್‌ಐಆರ್‌ ಪ್ರಕ್ರಿಯೆ ಬಗ್ಗೆ ಕಾಂಗ್ರೆಸ್ ಆಧಾರರಹಿತ ಆರೋಪಗಳನ್ನು ಮಾಡಿ ಮತದಾರರಲ್ಲಿ ಗೊಂದಲ ಮೂಡಿಸುತ್ತಿದೆ ಎಂದು ಟೀಕಿಸಿದ್ದಾರೆ.

ಮಡಿಕೇರಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್‌) ವೇಳೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಎಷ್ಟು ಮತದಾರರ ಹೆಸರುಗಳನ್ನು ಕಾನೂನುಬಾಹಿರವಾಗಿ ಪಟ್ಟಿಯಿಂದ ತೆಗೆದುಹಾಕಲಾಗಿದೆ? ಯಾರಿಗೆ ಅನ್ಯಾಯವಾಗಿದೆ? ಈ ವಿವರಗಳನ್ನು ಕಾಂಗ್ರೆಸ್ ಪಕ್ಷ ದಾಖಲೆಗಳ ಸಹಿತ ಬಹಿರಂಗಪಡಿಸಲಿ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಸವಾಲು ಹಾಕಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, ಎಸ್‌ಐಆರ್‌ ಪ್ರಕ್ರಿಯೆ ಬಗ್ಗೆ ಕಾಂಗ್ರೆಸ್ ಆಧಾರರಹಿತ ಆರೋಪಗಳನ್ನು ಮಾಡಿ ಮತದಾರರಲ್ಲಿ ಗೊಂದಲ ಮೂಡಿಸುತ್ತಿದೆ ಎಂದು ಟೀಕಿಸಿದ್ದಾರೆ. ಒಬ್ಬ ವ್ಯಕ್ತಿಯ ಹೆಸರು ಎರಡು ಕಡೆ ನೋಂದಣಿಯಾಗಿದ್ದರೆ ಒಂದು ಕಡೆಗಿನ ನೋಂದಣಿಯನ್ನು ರದ್ದುಪಡಿಸುವುದು, ಮೃತಪಟ್ಟವರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕುವುದು ಹಾಗೂ ವಿಳಾಸ ಬದಲಿಸಿರುವವರ ನೋಂದಣಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದು ಹೇಗೆ ತಪ್ಪಾಗುತ್ತದೆ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರು ವಿನಾಕಾರಣ ನಮೂನೆ 7ರ ಅರ್ಜಿಗಳನ್ನು ಸಲ್ಲಿಸಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಆರೋಪಕ್ಕೆ ಬಿಜೆಪಿ ಪ್ರತಿಕ್ರಿಯಿಸಿದಾಗ, ಪಕ್ಷವು ಚುನಾವಣಾ ಆಯೋಗದ ವಕ್ತಾರರಂತೆ ವರ್ತಿಸುತ್ತಿದೆ ಎಂದು ಕಾಂಗ್ರೆಸ್ ಟೀಕಿಸುತ್ತಿದೆ. ಪಕ್ಷದ ವಿರುದ್ಧದ ಆರೋಪಗಳಿಗೆ ಉತ್ತರ ನೀಡುವುದು ಹೇಗೆ ತಪ್ಪಾಗುತ್ತದೆ ಎಂದು ರಾಕೇಶ್ ದೇವಯ್ಯ ಪ್ರಶ್ನಿಸಿದ್ದಾರೆ.

ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಲೋಪವಾಗಿದ್ದರೆ ಅಥವಾ ಯಾರಿಗಾದರೂ ಅನ್ಯಾಯವಾಗಿದ್ದರೆ, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸಿ ನ್ಯಾಯಾಲಯದ ಮೊರೆ ಹೋಗಬಹುದು. ವಿರಾಜಪೇಟೆ ಕ್ಷೇತ್ರದಲ್ಲಿ ಎಷ್ಟು ಮಂದಿಗೆ ಅನ್ಯಾಯವಾಗಿದೆ ಎಂಬ ವಿವರವನ್ನು ಕಾಂಗ್ರೆಸ್ ಮೊದಲು ಸಾರ್ವಜನಿಕರ ಮುಂದಿಡಲಿ ಎಂದು ಅವರು ಒತ್ತಾಯಿಸಿದ್ದಾರೆ.

ರಾಷ್ಟ್ರೀಯ ನಾಯಕರನ್ನು ಮೆಚ್ಚಿಸುವ ಉದ್ದೇಶದಿಂದ ಕ್ಷೇತ್ರದ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡಬಾರದು. ವಿರಾಜಪೇಟೆಯ ಮತದಾರರಿಗೆ ತಮ್ಮ ಮತದಾನದ ಹಕ್ಕು, ಚುನಾವಣಾ ಆಯೋಗದ ಪಾತ್ರ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ಬಗ್ಗೆ ಅರಿವಿದೆ ಎಂದು ರಾಕೇಶ್ ದೇವಯ್ಯ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related Posts