ಬೆಳ್ತಂಗಡಿ, ನ. 08: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಚುನಾವಣಾ ಪೂರ್ವಭಾವಿ ಸಭೆ (ಎಲೆಕ್ಷನ್ ಸಮ್ಮಿಟ್) ಬೆಳ್ತಂಗಡಿಯ ಜಮೀಯತುಲ್ ಫಲಾಹ್ ಸಭಾಂಗಣದಲ್ಲಿ ಕ್ಷೇತ್ರ ಸಮಿತಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು, “ಪಕ್ಷವು ಈಗಾಗಲೇ ಹಮ್ಮಿಕೊಂಡಿರುವ ವಿವಿಧ ಜನಪರ ಕಾರ್ಯಕ್ರಮಗಳು, ಹೋರಾಟಗಳು ಹಾಗೂ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಕಾರ್ಯಗಳ ಮೂಲಕ ಜನರೊಂದಿಗೆ ನಿಕಟ ಸಂಪರ್ಕವನ್ನು ಬೆಳೆಸಿಕೊಂಡಿದೆ. ಜನರ ಸಂಕಷ್ಟಗಳಿಗೆ ಸ್ಪಂದಿಸಿ, ಅವರ ಹಕ್ಕುಗಳಿಗಾಗಿ ನಿರಂತರವಾಗಿ ಧ್ವನಿ ಎತ್ತುತ್ತಿರುವ ನಮ್ಮ ಕಾರ್ಯವೈಖರಿಯನ್ನು ಜನರು ಗಮನಿಸುತ್ತಿದ್ದಾರೆ. ನಮ್ಮ ಜನಪರ ಕಾರ್ಯಚಟುವಟಿಕೆಗಳನ್ನು ಕಂಡು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಸ್ಡಿಪಿಐ ಸ್ಪರ್ಧಿಸುವುದನ್ನು ಜನರೇ ಕಾತರದಿಂದ ಕಾಯುತ್ತಿದ್ದಾರೆ. ಇದು ಪಕ್ಷದ ಮೇಲಿರುವ ಜನರ ವಿಶ್ವಾಸ ಮತ್ತು ನಿರೀಕ್ಷೆಗೆ ಸಾಕ್ಷಿಯಾಗಿದೆ” ಎಂದು ಹೇಳಿದರು.

ಕ್ಷೇತ್ರ ಚುನಾವಣಾ ಉಸ್ತುವಾರಿ ಹಾಗೂ ಕ್ಷೇತ್ರ ಸಮಿತಿ ಉಪಾಧ್ಯಕ್ಷ ನಿಸಾರ್ ಕುದ್ರಡ್ಕ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಬೀರ್ ತಲಪಾಡಿ, ಜಿಲ್ಲಾ ಕಾರ್ಯದರ್ಶಿಗಳಾದ ಅಶ್ರಫ್ ತಲಪಾಡಿ ಹಾಗೂ ನವಾಜ್ ಕಟ್ಟೆ ಮತ್ತು ಜಿಲ್ಲಾ ಚುನಾವಣಾ ಉಸ್ತುವಾರಿ ಸಿದ್ದಿಕ್ ಸವಣೂರು ಭಾಗವಹಿಸಿ ಚುನಾವಣಾ ಪೂರ್ವ ಸಿದ್ಧತೆಗಳ ಕುರಿತು ಮಾತನಾಡಿದರು.
ಸಭೆಯಲ್ಲಿ ಮುಂಬರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಆಯ್ಕೆ, ಕ್ಷೇತ್ರವಾರು ಚುನಾವಣಾ ಸಿದ್ಧತೆ, ಕಾರ್ಯಕರ್ತರ ಜವಾಬ್ದಾರಿ ಹಾಗೂ ಚುನಾವಣಾ ಪ್ರಚಾರದ ರೂಪುರೇಷೆಗಳ ಕುರಿತು ಸಮಗ್ರ ಚರ್ಚೆ ನಡೆಯಿತು. ಬ್ರಾಂಚ್ ಮಟ್ಟದಿಂದಲೇ ಪಕ್ಷವನ್ನು ಸಂಘಟನಾತ್ಮಕವಾಗಿ ಸಜ್ಜುಗೊಳಿಸುವುದರ ಜೊತೆಗೆ ಜನರ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುವ ಮೂಲಕ ಪಕ್ಷದ ಜನಬೆಂಬಲವನ್ನು ಮತ್ತಷ್ಟು ಬಲಪಡಿಸುವ ಕುರಿತು ಒತ್ತು ನೀಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಮಿತಿ ಸದಸ್ಯ ರಹಮಾನ್ ನಾವೂರು ಸೇರಿದಂತೆ ಕ್ಷೇತ್ರ ಸಮಿತಿ, ಬ್ಲಾಕ್ ಸಮಿತಿ ಹಾಗೂ ಬ್ರಾಂಚ್ ಮಟ್ಟದ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ ಕಾರ್ಯಕ್ರಮ ನಿರೂಪಿಸಿದರು.