ಸುಳ್ಯ, ನ.9: ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಗಾಂಧಿನಗರ ಮಸೀದಿ ಮುಂಭಾಗದಿಂದ ನಾವೂರು–ಬೋರುಗುಡ್ಡೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ನವೆಂಬರ್ 14ರೊಳಗೆ ದುರಸ್ತಿಗೊಳಿಸದಿದ್ದಲ್ಲಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯ ಕೆ.ಎಸ್. ಉಮ್ಮರ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಅವರು, ರಸ್ತೆಯ ದುಸ್ಥಿತಿಯಿಂದಾಗಿ ಸಾರ್ವಜನಿಕರು, ವಾಹನ ಸವಾರರು ಹಾಗೂ ಶಾಲಾ ವಿದ್ಯಾರ್ಥಿಗಳು ಪ್ರತಿನಿತ್ಯ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ವಿಶೇಷವಾಗಿ ಸಂತೋಷ್ ಟಾಕೀಸ್ ಬಳಿಯಿಂದ ಹಾದುಹೋಗುವ ಮುಖ್ಯ ರಸ್ತೆಯ ಮಧ್ಯದಲ್ಲಿರುವ ನೀರಿನ ಪೈಪ್ ಒಡೆದು ನಿರಂತರವಾಗಿ ನೀರು ಸೋರಿಕೆಯಾಗುತ್ತಿದ್ದು, ಇದರಿಂದ ರಸ್ತೆ ಮತ್ತಷ್ಟು ಹದಗೆಡುತ್ತಿದೆ. ರಸ್ತೆಯುದ್ದಕ್ಕೂ ನಿರ್ಮಾಣವಾಗಿರುವ ಹೊಂಡಗುಂಡಿಗಳಿಂದಾಗಿ ಸಾರ್ವಜನಿಕರು ಬಿದ್ದು ಕೈಕಾಲು ಮುರಿತದಂತಹ ಗಾಯಗಳಿಗೆ ಒಳಗಾಗಿರುವ ಘಟನೆಗಳೂ ನಡೆದಿವೆ ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ, ಒಡೆದಿರುವ ನೀರಿನ ಪೈಪ್ ಸರಿಪಡಿಸುವುದರ ಜೊತೆಗೆ ರಸ್ತೆಗೆ ಡಾಂಬರೀಕರಣ ನಡೆಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.
ನವೆಂಬರ್ 14ರ ಶನಿವಾರದೊಳಗೆ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳದಿದ್ದಲ್ಲಿ, ಅದೇ ದಿನ ಗಾಂಧಿನಗರ ಮಸೀದಿ ಮುಂಭಾಗದಲ್ಲಿ ಸಾರ್ವಜನಿಕರೊಂದಿಗೆ ಸೇರಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕೆ.ಎಸ್. ಉಮ್ಮರ್ ಮನವಿಯಲ್ಲಿ ಎಚ್ಚರಿಸಿದ್ದಾರೆ