ಸಿದ್ದಾಪುರ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಸಿದ್ದಾಪುರದ ಸಮಾನ ಮನಸ್ಕರ ವೇದಿಕೆ ವತಿಯಿಂದ ಸೋಮವಾರ ಬೃಹತ್ ಕಾಲ್ನಡಿಗೆ ಜಾಥಾ ಹಾಗೂ ಸಾರ್ವಜನಿಕ ಪ್ರತಿಭಟನಾ ಸಭೆ ನಡೆಯಿತು.
ನೆಲ್ಯಹುದಿಕೇರಿ ಪಟ್ಟಣದಲ್ಲಿ ಅಹಿಂದ ಬಳಗದ ಕೊಡಗು ಜಿಲ್ಲಾಧ್ಯಕ್ಷ ನಾಪಂಡ ಮುತ್ತಪ್ಪ ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಿದರು. ನೂರಾರು ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಾ ಸಿದ್ದಾಪುರದತ್ತ ಸಾಗಿದರು. ಬಳಿಕ ಸಿದ್ದಾಪುರ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ರಚಿಸಿ ಎಸ್ಐಆರ್ ಪ್ರಕ್ರಿಯೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕೇರಳ ರಾಜ್ಯ ಡಿವೈಎಫ್ಐ ಸಹಕಾರ್ಯದರ್ಶಿ ಕೆ. ಅನುಶ್ರೀ, ಎಸ್ಐಆರ್ ಪ್ರಕ್ರಿಯೆಯ ಹೆಸರಿನಲ್ಲಿ ದೇಶಾದ್ಯಂತ ಸುಮಾರು 13 ಕೋಟಿ ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಆರೋಪಿಸಿದರು. ಜೀವಂತವಾಗಿರುವ ಹಲವರನ್ನು ಮೃತಪಟ್ಟಿದ್ದಾರೆಂದು ದಾಖಲಿಸಿ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲಾಗಿದ್ದು, ಈ ಸಂಬಂಧ ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದರು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಬೇಕಾದ ಚುನಾವಣಾ ಆಯೋಗವು ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಆರೋಪಿಸಿದರು.
ದಕ್ಷಿಣ ಕನ್ನಡದ ಧಾರ್ಮಿಕ ಪರಿಷತ್ ಪ್ರಮುಖ ಲಕ್ಷ್ಮೀಶ್ ಕಬ್ಬಡ್ಕ ಮಾತನಾಡಿ, ಕೇಂದ್ರ ಸರ್ಕಾರವು ಚುನಾವಣಾ ಆಯೋಗದ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿದರು. ಧರ್ಮದ ಆಧಾರದಲ್ಲಿ ಸಮಾಜವನ್ನು ವಿಭಜಿಸಿ ರಾಜಕೀಯ ಲಾಭ ಪಡೆಯುವ ಪ್ರಯತ್ನ ನಡೆಯುತ್ತಿದೆ ಎಂದು ಟೀಕಿಸಿದರು.
ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಮಾತನಾಡಿ, ರಾಜ್ಯದಲ್ಲಿ ಸುಮಾರು ಒಂದು ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಆರೋಪಿಸಿದರು. ಚುನಾವಣಾ ಆಯೋಗವು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕಿದ್ದು, ಅದರ ನಡೆಯ ವಿರುದ್ಧ ಜನರು ಧ್ವನಿ ಎತ್ತಬೇಕಾಗಿದೆ ಎಂದರು.
ಸಮಾನ ಮನಸ್ಕರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಪಿ.ಆರ್. ಭರತ್ ಪ್ರಾಸ್ತಾವಿಕವಾಗಿ ಮಾತನಾಡಿ, ಎಸ್ಐಆರ್ ಪ್ರಕ್ರಿಯೆಯಿಂದ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಮತದಾನದ ಹಕ್ಕಿನ ರಕ್ಷಣೆಯ ಅಗತ್ಯತೆಯ ಕುರಿತು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾನ ಮನಸ್ಕರ ವೇದಿಕೆಯ ಅಧ್ಯಕ್ಷ ಪಿ.ವಿ. ಜಾನ್ಸನ್ ವಹಿಸಿದ್ದರು.
ಈ ಸಂದರ್ಭದಲ್ಲಿ ರೈತ ಮುಖಂಡ ನೆರವಂಡ ಉಮೇಶ್, ವೇದಿಕೆಯ ಪ್ರಮುಖರಾದ ಎ.ಕೆ. ಹಕ್ಕೀಂ, ಎಸ್.ಬಿ. ಪ್ರತೀಶ್, ಕೆ.ಎಂ. ಸೈಯದ್ ಭಾವ, ಎಚ್.ಬಿ. ರಮೇಶ್, ಬಷೀರ್ ಅಹ್ಮದ್, ಎ.ಎಸ್. ಮುಸ್ತಫ, ಕೆ.ಯು. ಮಜೀದ್, ಕೆ.ಎ. ಅಸ್ಕರ್, ಎಂ.ಕೆ. ಅಶ್ರಫ್, ಜೋಸೆಫ್ ಸಾಂ, ಉದಯ ಕುಮಾರ್, ವೈಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.