ಕೊಡಗು: ಕರ್ನಾಟಕ ಸರ್ಕಾರವು ವಿವಿಧ ನಿಗಮ ಹಾಗೂ ಮಂಡಳಿಗಳಿಗೆ ಸದಸ್ಯರು ಮತ್ತು ನಿರ್ದೇಶಕರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದು, ಕಾವೇರಿ ಜಲಾನಯನ ಪ್ರದೇಶ ಅಭಿವೃದ್ಧಿ ಮಂಡಳಿಯ ನಿರ್ದೇಶಕರಾಗಿ ಕೊಡಗು ಜಿಲ್ಲೆಯ ಚೆಂಬು ಗ್ರಾಮದ ಹೊಸೂರಿನ ಸೂರಜ್ ಹೊಸೂರು ಅವರನ್ನು ನೇಮಕ ಮಾಡಿದೆ.
ವಿದ್ಯಾರ್ಥಿ ಜೀವನದಿಂದಲೇ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು, ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸೂರಜ್ ಹೊಸೂರು ಅವರಿಗೆ ಮಹತ್ವದ ಜವಾಬ್ದಾರಿ ಲಭಿಸಿರುವುದು ಅವರ ಸುದೀರ್ಘ ಸಂಘಟನಾ ಸೇವೆಗೆ ಸಂದ ಗೌರವವಾಗಿದೆ.
ಮಂಗಳೂರು ವಿಶ್ವವಿದ್ಯಾನಿಲಯದಿಂದ ಬಿಬಿಎಂ ಪದವಿ ಪಡೆದಿರುವ ಸೂರಜ್, ಕಾಲೇಜು ದಿನಗಳಲ್ಲಿಯೇ ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯರಾಗಿ ಕಾರ್ಯನಿರ್ವಹಿಸುವ ಮೂಲಕ ತಮ್ಮ ನಾಯಕತ್ವ ಸಾಮರ್ಥ್ಯವನ್ನು ಪ್ರದರ್ಶಿಸಿದ್ದರು. ವಿದ್ಯಾರ್ಥಿ ದೆಸೆಯಿಂದಲೇ ಸಾರ್ವಜನಿಕ ಸೇವೆಯತ್ತ ಆಸಕ್ತಿ ಬೆಳೆಸಿಕೊಂಡ ಇವರು, ವಿವಿಧ ಸಂಘಟನೆಗಳಲ್ಲಿ ಜವಾಬ್ದಾರಿಯುತ ಹುದ್ದೆಗಳನ್ನು ನಿರ್ವಹಿಸಿ ಗುರುತಿಸಿಕೊಂಡಿದ್ದಾರೆ.
ಪ್ರಸ್ತುತ ಕೊಡಗು ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಸೂರಜ್, ಪಕ್ಷದ ಸಂಘಟನೆಯನ್ನು ಬಲಪಡಿಸುವ ಕಾರ್ಯದಲ್ಲಿ ಸಕ್ರಿಯರಾಗಿದ್ದಾರೆ. ಈ ಹಿಂದೆ ಎನ್ಎಸ್ಯುಐ ಕಾರ್ಯದರ್ಶಿಯಾಗಿ ಹಾಗೂ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುವ ಮೂಲಕ ಯುವಜನರನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
2018ರ ವಿಧಾನಸಭಾ ಚುನಾವಣೆಯಲ್ಲಿ ನಾಪೊಕ್ಲು ಬ್ಲಾಕ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿದ್ದ ಅವರು, 2023ರ ವಿಧಾನಸಭಾ ಚುನಾವಣೆಯಲ್ಲಿ ಚೆಂಬು, ಸಂಪಾಜೆ ಹಾಗೂ ಪೆರಾಜೆ ಭಾಗಗಳ ಚುನಾವಣಾ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೆ, ಹುಣಸೂರು ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿಯೂ ಉಸ್ತುವಾರಿ ಜವಾಬ್ದಾರಿ ನಿಭಾಯಿಸಿ ತಮ್ಮ ಸಂಘಟನಾ ಕೌಶಲವನ್ನು ಪ್ರದರ್ಶಿಸಿದ್ದಾರೆ.
ರಾಜಕೀಯ ಚಟುವಟಿಕೆಗಳೊಂದಿಗೆ ಸಾಮಾಜಿಕ ಸೇವೆಯಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಸೂರಜ್, ಮಿತ್ರಕೂಟ ಕ್ರೀಡಾ ಸಂಘದ ಕಾರ್ಯದರ್ಶಿ ಹಾಗೂ ಮಿತ್ರಕೂಟ ವಿಪತ್ತು ನಿರ್ವಹಣಾ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಿಪತ್ತು ನಿರ್ವಹಣೆ, ಕ್ರೀಡಾ ಚಟುವಟಿಕೆಗಳು ಹಾಗೂ ಯುವಜನರ ಸಂಘಟನೆಗೆ ಪ್ರೋತ್ಸಾಹ ನೀಡುವ ಮೂಲಕ ಸಾಮಾಜಿಕ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದಾರೆ.
ಇದಲ್ಲದೆ, ಕರ್ನಾಟಕ ರಕ್ಷಣಾ ವೇದಿಕೆಯ ಕೊಡಗು ಜಿಲ್ಲಾ ಉಪಾಧ್ಯಕ್ಷರಾಗಿ ಹಾಗೂ ಚೆಂಬು ಗ್ರಾಮದ ಜೈ ಭಾರತ್ ಯುವಕ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಅವರು, ಪ್ರಸ್ತುತ ಮಾರುತಿ ಇಂಟರ್ನ್ಯಾಶನಲ್ ಶಾಲೆಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
ವಿದ್ಯಾರ್ಥಿ ನಾಯಕತ್ವದಿಂದ ಆರಂಭಗೊಂಡು ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ವಿವಿಧ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿರುವ ಸೂರಜ್ ಹೊಸೂರು ಅವರಿಗೆ ಇದೀಗ ರಾಜ್ಯಮಟ್ಟದ ಮಂಡಳಿಯ ನಿರ್ದೇಶಕ ಸ್ಥಾನ ಲಭಿಸಿದೆ.
ಯುವ ನಾಯಕತ್ವ, ಸಂಘಟನಾ ಸಾಮರ್ಥ್ಯ ಹಾಗೂ ಸಾಮಾಜಿಕ ಸೇವೆಯ ಮೂಲಕ ತಮ್ಮದೇ ಆದ ಗುರುತನ್ನು ಮೂಡಿಸಿರುವ ಸೂರಜ್ ಹೊಸೂರು ಅವರ ನೇಮಕವು ಕೊಡಗು ಜಿಲ್ಲೆಯ ಯುವಜನತೆಗೆ ಪ್ರೇರಣೆಯಾಗಿದ್ದು, ನೂತನ ಜವಾಬ್ದಾರಿಯ ಮೂಲಕ ಕಾವೇರಿ ಜಲಾನಯನ ಪ್ರದೇಶದ ಅಭಿವೃದ್ಧಿಗೆ ಅವರು ಮಹತ್ವದ ಕೊಡುಗೆ ನೀಡುವ ನಿರೀಕ್ಷೆಯಿದೆ.