ಮಡಿಕೇರಿ: ಪ್ರವಾಸಿಗರ ನೆಚ್ಚಿನ ತಾಣವಾಗಿರುವ ಕೊಡಗಿನ ಪ್ರಸಿದ್ಧ ರಾಜಾಸೀಟು ಉದ್ಯಾನವನವು ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಒಂದು ತಿಂಗಳ ಕಾಲ ಪ್ರವಾಸಿಗರಿಗೆ ಬಂದ್ ಆಗಲಿದೆ.
ಈ ಕುರಿತು ಕೊಡಗು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ನವೆಂಬರ್ 16ರಿಂದ ಡಿಸೆಂಬರ್ 15ರವರೆಗೆ ರಾಜಾಸೀಟಿಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಮಡಿಕೇರಿಯ ಮಂಗೇರಿರ ಮುತ್ತಣ್ಣ ವೃತ್ತದಿಂದ ರಾಜಾಸೀಟು, ಚೌಟಿ ಮಾರಿಯಮ್ಮ ದೇವಸ್ಥಾನ ಹಾಗೂ ಎಲ್‌ಐಸಿ ಮಾರ್ಗವಾಗಿ ವಿವಿಧ ಬಡಾವಣೆಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಜಿಲ್ಲಾಧಿಕಾರಿ ಕಚೇರಿ ಪ್ರವೇಶದ್ವಾರದಿಂದ ಕುಂದೂರುಮೊಟ್ಟೆ ಚೌಟಿ ಮಾರಿಯಮ್ಮ ದೇವಸ್ಥಾನದವರೆಗೆ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಸುಮಾರು 3.5 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿರುವ ಈ ಕಾಮಗಾರಿಯಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣದ ಜೊತೆಗೆ ಪಾದಚಾರಿ ಮಾರ್ಗ ಹಾಗೂ ವಿದ್ಯುದೀಕರಣ ಕಾಮಗಾರಿಗಳೂ ಒಳಗೊಂಡಿವೆ.
ರಾಜಾಸೀಟಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲೇ ಕಾಮಗಾರಿ ನಡೆಯುತ್ತಿರುವುದರಿಂದ ಪರ್ಯಾಯ ಸಂಪರ್ಕ ಮಾರ್ಗದ ವ್ಯವಸ್ಥೆ ಇಲ್ಲದ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.
ರಾಜಾಸೀಟು ಹೊರತುಪಡಿಸಿ ಕೊಡಗು ಜಿಲ್ಲೆಯ ಇತರ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಭೇಟಿಗೆ ಯಾವುದೇ ನಿರ್ಬಂಧವಿರುವುದಿಲ್ಲ. ಎಂದಿನಂತೆ ಪ್ರವಾಸಿ ಚಟುವಟಿಕೆಗಳು ಮುಂದುವರಿಯಲಿವೆ.
ನವೆಂಬರ್‌ನಿಂದ ಜನವರಿ ಅಂತ್ಯದವರೆಗೆ ಕೊಡಗಿನಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿರುತ್ತದೆ. ಈ ಅವಧಿಯಲ್ಲೇ ರಾಜಾಸೀಟು ಒಂದು ತಿಂಗಳ ಕಾಲ ಬಂದ್ ಆಗುತ್ತಿರುವುದರಿಂದ ಕೊಡಗಿಗೆ ಭೇಟಿ ನೀಡುವ ಪ್ರವಾಸಿಗರಿಗೆ ನಿರಾಸೆಯಾಗುವ ಸಾಧ್ಯತೆಯಿದೆ.