Featured, ಇತರೆ

ಸುಳ್ಯ ಗ್ರೀನ್ ವ್ಯೂ ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸಂಭ್ರಮ

ವಿದ್ಯಾರ್ಥಿಗಳ ಸುಪ್ತ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ಬಿಇಒ ವೈ.ಎಸ್. ಹರಗಿ

ಸುಳ್ಯ: ವಿದ್ಯಾರ್ಥಿಗಳಲ್ಲಿ ಅಡಗಿರುವ ಸಾಹಿತ್ಯಿಕ, ಸಾಂಸ್ಕೃತಿಕ ಹಾಗೂ ಕಲಾತ್ಮಕ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಸುಳ್ಯದ ಗ್ರೀನ್ ವ್ಯೂ ಶಾಲಾ ವಠಾರದಲ್ಲಿ ಅದ್ದೂರಿಯಾಗಿ ನಡೆಯಿತು.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಮಜೀದ್ ಜನತಾ ವಹಿಸಿದ್ದರು. ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್. ಹರಗಿ ಅವರು ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು ನಂತರ ಮಾತನಾಡಿದ ಅವರು, ಪ್ರತಿಭಾ ಕಾರಂಜಿಯು ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಅನಾವರಣಗೊಳಿಸುವುದರ ಜೊತೆಗೆ ಅವರ ಭವಿಷ್ಯವನ್ನು ರೂಪಿಸುವ ಉತ್ತಮ ವೇದಿಕೆಯಾಗಿದೆ. ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಆತ್ಮವಿಶ್ವಾಸ, ಸೃಜನಶೀಲತೆ ಹಾಗೂ ಕಲಾತ್ಮಕ ಅಭಿರುಚಿಯನ್ನು ಬೆಳೆಸಲು ಸಹಕಾರಿಯಾಗಿವೆ ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫ ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಕಾಶ್ ಮೂಡಿತ್ತಾಯ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಸಮಿತಿ ಸಂಯೋಜಕರಾದ ಕೆ.ಎಸ್. ಉಮ್ಮರ್, ಶಾಫಿ ಕುತ್ತಾಮೊಟ್ಟೆ, ನಿರ್ದೇಶಕರಾದ ಎಸ್.ಎಂ. ಅಬ್ದುಲ್ ಹಮೀದ್, ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಶನ್ ಅಧ್ಯಕ್ಷ ಕೆ.ಬಿ. ಇಬ್ರಾಹಿಂ, ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ಅಡ್ವಕೇಟ್ ಮೂಸ ಕುಂಞ ಪೈಂಬಚ್ಚಾಲ್ ಹಾಗೂ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಎನ್.ಎ. ಅಬ್ದುಲ್ಲ ಮೊದಲಾದವರು ಉಪಸ್ಥಿತರಿದ್ದರು.

ಶಿಕ್ಷಣ ಸಂಯೋಜಕಿ ಧನಲಕ್ಷ್ಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲೆಯ ಮುಖ್ಯ ಶಿಕ್ಷಕ ಇಲ್ಯಾಸ್ ಕಾಶಿಪಟ್ಟಣ ಸ್ವಾಗತಿಸಿದರು. ಶಿಕ್ಷಕಿ ಜಯಂತಿ ವಂದಿಸಿದರು. ಶಿಕ್ಷಕ ರಂಜಿತ್ ಕಾರ್ಯಕ್ರಮ ನಿರೂಪಿಸಿದರು.

Related Posts